ತುಮಕೂರು: ಲಡಾಖ್ ನ ಖ್ಯಾತ ಪರಿಸರವಾದಿ ಸೋನಮ್ ವಾಂಗ್ಚುಕ್ ಹಾಗೂ ಇತರೆ ಉಪವಾಸನಿರತ ಹೋರಾಟಗಾರರೊಂದಿಗೆ ಪ್ರಜಾತಾಂತ್ರಿಕ ಸಂವಾದ ಆರಂಭಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ, ಭಾರತದ ಸನ್ಮಾನ್ಯ ರಾಷ್ಟ್ರಪತಿಗಳಿಗೆ ಸಲ್ಲಿಸುವ ಮನವಿ ಪತ್ರಕ್ಕೆ ತುಮಕೂರು ನಗರದ ವಿವಿಧ ಕಾಲೇಜುಗಳು, ಮೈದಾನ ಹಾಗೂ ಹಾಸ್ಟೆಲ್‌ಗಳಲ್ಲಿ ವ್ಯಾಪಕ ಆನ್‌ಲೈನ್ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಅವರು, “ನೀಟ್–ಯುಜಿ (NEET–UG) ಪರೀಕ್ಷೆಯ ಸುತ್ತಲಿನ ಪರೀಕ್ಷಾ ಬಿಕ್ಕಟ್ಟು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ವ್ಯವಸ್ಥಿತ ವೈಫಲ್ಯದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ನೀಟ್ ಪರೀಕ್ಷೆ ರದ್ದತಿ ಮತ್ತು ನಂತರದ ಮರು-ಪರೀಕ್ಷೆಯ ಗೊಂದಲಗಳಿಂದಾಗಿ ಈಗಾಗಲೇ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಹಲವರು ತೀವ್ರ ಖಿನ್ನತೆಗೆ ಒಳಗಾಗಿದ್ದಾರೆ,” ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.
ಮುಂದುವರಿದು ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಈ ಮೌನ ಮತ್ತು ವೈಫಲ್ಯದ ವಿರುದ್ಧ ಪರಿಸರವಾದಿ ಸೋನಮ್ ವಾಂಗ್ಚುಕ್ ಮತ್ತು ಇತರ ಪ್ರತಿಭಟನಾಕಾರರು ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವೈದ್ಯಕೀಯ ವರದಿಗಳ ಪ್ರಕಾರ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸುತ್ತಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿಯುತ ಪ್ರಜಾಪ್ರಭುತ್ವದ ಬೇಡಿಕೆಗಳನ್ನು ಸರ್ಕಾರವು ನಿರ್ಲಕ್ಷಿಸುತ್ತಲೇ ಇರುವುದು ಖೇದಕರ. ಮುಂದಿನ ದುರಂತಗಳನ್ನು ತಡೆಯಲು ಕೇಂದ್ರ ಸರ್ಕಾರ ತಕ್ಷಣವೇ ತನ್ನ ಮೌನ ಮುರಿದು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಬೇಕು,” ಎಂದು ಆಗ್ರಹಿಸಿದರು.
ಪ್ರಮುಖ ಬೇಡಿಕೆಗಳು:
- ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಮತ್ತು ಇತರ ಎಲ್ಲಾ ಉಪವಾಸ ಸತ್ಯಾಗ್ರಹಿಗಳೊಂದಿಗೆ ಪ್ರಜಾಪ್ರಭುತ್ವ ಮಾದರಿಯ ಚರ್ಚೆಗಳನ್ನು ಪ್ರಾರಂಭಿಸಬೇಕು.
- ಪರೀಕ್ಷಾ ಅಕ್ರಮ ಹಾಗೂ ಬಿಕ್ಕಟ್ಟಿನ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
- ಪರೀಕ್ಷೆಗಳನ್ನು ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಎನ್‌ಟಿಎ (NTA – ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ಸಂಸ್ಥೆಯನ್ನು ತಕ್ಷಣವೇ ರದ್ದುಗೊಳಿಸಬೇಕು.
ಈ ಆನ್ ಲೈನ್ ಸಹಿ ಸಂಗ್ರಹ ಅಭಿಯಾನದ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಸೈಯದ್, ಮಧು, ಪ್ರಶಾಂತ್, ಹರೀಶ್ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಹೋರಾಟಕ್ಕೆ ಬೆಂಬಲ ಸೂಚಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


