ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು ತುರುವೇಕೆರೆ ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.
ಒಳಮೀಸಲಾತಿ ಅನ್ವಯ ಮಾಡದೆಯೇ ಸುಮಾರು 15 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಮಾದಿಗ ಸಮುದಾಯಕ್ಕೆ ಭಾರೀ ಅನ್ಯಾಯವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಮುದಾಯದ ಹಿತರಕ್ಷಣೆ ಮಾಡಲು ವಿಫಲರಾಗಿರುವ ಮಾದಿಗ ಸಮುದಾಯದ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬೀದಿಗೆ ಬಂದು ಹೋರಾಟ ಮಾಡಬೇಕು ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಒತ್ತಾಯಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ಗೆ ಪೂರ್ಣ ಬೆಂಬಲ ನೀಡಿತ್ತು. ಆದರೆ ಈಗ ಸರ್ಕಾರವು ಸಮುದಾಯವನ್ನು ಕಡೆಗಣಿಸುತ್ತಿದೆ. ಸಚಿವರಾದ ಜಿ. ಪರಮೇಶ್ವರ ಹಾಗೂ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿಗಳ ಕೈಗೊಂಬೆಯಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿ ಪ್ರಕ್ರಿಯೆ ನಡೆಸಬಾರದು ಎಂದು ಆಗ್ರಹಿಸಿ ಗ್ರೇಡ್–2 ತಹಶೀಲ್ದಾರ್ ಸುಮತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಬೆಂಗಳೂರಿನಲ್ಲಿ ನಡೆಯಲಿರುವ ಮುಂದಿನ ಬೃಹತ್ ಪ್ರತಿಭಟನೆಗೆ ತಾಲ್ಲೂಕಿನ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಮಲ್ಲೂರು ತಿಮ್ಮೇಶ್, ತೊರೆಮಾವಿನಹಳ್ಳಿ ಚಂದ್ರಯ್ಯ, ಲಕ್ಷ್ಮೀದೇವಮ್ಮ ಸೇರಿದಂತೆ ಸಮುದಾಯದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


