ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ಶ್ರೀರಾಮ ಮಂದಿರವನ್ನು ಜನವರಿ 22, 2024 ರಂದು ಮಧ್ಯಾಹ್ನ 12:30 ಕ್ಕೆ ಉದ್ಘಾಟಿಸಲಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್ ಸದಸ್ಯರು ತಿಳಿಸಿದ್ದಾರೆ. ಜನವರಿ 24 ರಂದು ದೇವಾಲಯವನ್ನು ಸಾರ್ವಜನಿಕರಿಗೆ ತೆರೆಯಲಾಗುವುದು. ಟ್ರಸ್ಟ್ ನ ಸದಸ್ಯರು ಪ್ರಧಾನಿಯವರನ್ನು ಭೇಟಿಯಾಗಿ ಆಹ್ವಾನ ನೀಡಿದರು. ಟ್ರಸ್ಟ್ ನ ಆಹ್ವಾನವನ್ನು ಸ್ವೀಕರಿಸಿದ್ದೇನೆ ಮತ್ತು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಎಂದು ಪ್ರಧಾನ ಮಂತ್ರಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನ ಪ್ರಾಣಪ್ರತಿಷ್ಠೆ ಮಾಡಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ. ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಈ ಹಿಂದೆ ಮೂರು ಅಂತಸ್ತಿನ ದೇವಾಲಯದ ಸಂಕೀರ್ಣದ ನೆಲ ಅಂತಸ್ತಿನ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಘೋಷಿಸಿದ್ದರು. ಆಗಸ್ಟ್ 5, 2020 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇವಾಲಯದ ಶಂಕುಸ್ಥಾಪನೆ ಸಮಾರಂಭವನ್ನು ನೆರವೇರಿಸಿದರು.
2019 ರಲ್ಲಿ, ಅಯೋಧ್ಯೆಯಲ್ಲಿ ವಿವಾದಿತ ರಾಮ ಜನ್ಮಭೂಮಿ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಮಂದಿರದ ನಿರ್ಮಾಣ ಪ್ರಾರಂಭವಾಯಿತು. ಈ ಜಾಗದಲ್ಲಿ ರಾಮ ಮಂದಿರ ನಿರ್ಮಿಸಬಹುದು ಮತ್ತು ಅದರ ಬದಲಾಗಿ ಸುನ್ನಿ ವಕ್ಫ್ ಮಂಡಳಿಗೆ ಹೊಸ ಮಸೀದಿ ನಿರ್ಮಿಸಲು ಐದು ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.


