ಗುಬ್ಬಿ : ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಅನುಕೂಲವಾಗುವ ಉದ್ದೇಶದಿಂದ ಸುಮಾರು 35 ಸಾವಿರ ರೂ. ವೆಚ್ಚದ ಯುಪಿಎಸ್ ಅನ್ನು ತುಮಕೂರು ಹಾಲು ಒಕ್ಕೂಟದ ವತಿಯಿಂದ ನೀಡಲಾಗುತ್ತಿದೆ ಎಂದು ಒಕ್ಕೂಟದ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ನಂದಿನಿ ಕ್ಷೀರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಭರವಸೆ ನೀಡಿದಂತೆ ಯುಪಿಎಸ್ ಅನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್ ಗೆ 8 ರೂ. ಹೆಚ್ಚಿಸಿರುವುದನ್ನು ಸ್ವಾಗತಿಸುತ್ತೇನೆ. ಈ ಹೆಚ್ಚಳದ ಪೈಕಿ 7 ರೂ.ಗಳನ್ನು ರೈತರಿಗೆ ನೀಡಲಾಗುತ್ತಿದ್ದು, ಇದರಿಂದ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬರಗಾಲದ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಂತಿರುವುದು ಸ್ವಾಗತಾರ್ಹ ಎಂದರು.
ಪಕ್ಕದ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಹೆಚ್ಚಳ ದೊಡ್ಡ ಪ್ರಮಾಣದಲ್ಲಿಲ್ಲ. ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ಅನುಕೂಲಕರವಾಗಿದೆ ಎಂದು ಅಭಿಪ್ರಾಯಪಟ್ಟರು.
ಮುಂದಿನ ದಿನಗಳಲ್ಲಿ ತುಮಕೂರು ಹಾಲು ಒಕ್ಕೂಟದ ವತಿಯಿಂದ ಹಾಲು ಹಾಗೂ ಸಿಹಿ ಪದಾರ್ಥಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೊಸ ಉತ್ಪನ್ನಗಳನ್ನು ತಯಾರಿಸುವ ಯೋಜನೆ ರೂಪಿಸಲಾಗಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗುಬ್ಬಿ ತಾಲೂಕು ವ್ಯವಸ್ಥಾಪಕ ಶಂಕರ್ ನಾಗ್, ರಾಜಕುಮಾರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಡಿ. ಮಂಜುನಾಥ್ ಕಲ್ಲೂರು, ಪ್ರಧಾನ ಕಾರ್ಯದರ್ಶಿ ಸಂಜಯ್ ಕೆ., ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ದೊಡ್ಡಗುಣಿ, ಜಿಲ್ಲಾ ನಿರ್ದೇಶಕ ಯೋಗೇಶ್ ಮೇಳಕಲ್ಲಹಳ್ಳಿ, ಖಜಾಂಚಿ ಆನಂದ್ ದೀಕ್ಷಿತ್, ನಿರ್ದೇಶಕ ಲೋಕೇಶ್, ಪತ್ರಕರ್ತರಾದ ಹನುಮಂತರಾಜು, ರಂಗನಾಥ್ ಸೇರಿದಂತೆ ರೈತರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
