ತಿಪಟೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರಿ ಕಾರ್ಯಕ್ರಮ ಎಂದು ಪರಿಗಣಿಸದೆ, ನಮ್ಮೆಲ್ಲರ ಹಬ್ಬವೆಂದು ಭಾವಿಸಿ ಆಚರಿಸಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕುಮಾರ್.ಎಚ್.ಸಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜು ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಸ್ವಾತಂತ್ರ್ಯ ಎಂಬುದು ಕೇವಲ ಮಂತ್ರ, ತಂತ್ರ, ಕುತಂತ್ರದಿಂದ ದೊರೆತದ್ದಲ್ಲ; ಅದು ಹಲವಾರು ಮಹನೀಯರ ತ್ಯಾಗ ಮತ್ತು ಹೋರಾಟದ ಫಲ. ಅವರ ಬಲಿದಾನ ಸಾರ್ಥಕವಾಗಬೇಕೆಂದರೆ, ಪ್ರತಿಯೊಬ್ಬರೂ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಲೆಪ್ಟಿನೆಂಟ್ ಡಾ. ವಿರುಪಾಕ್ಷ.ಜೆ.ಡಿ ಅವರ ನೇತೃತ್ವದಲ್ಲಿ ಎನ್ಸಿಸಿ (NCC) ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ತದನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ದೇಶಪ್ರೇಮ, ರಾಷ್ಟ್ರದ ಏಕತೆ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಬದುಕುವ ಕುರಿತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.
ಕಾರ್ಯಕ್ರಮದ ಕೊನೆಯಲ್ಲಿ ನೆರೆದಿದ್ದ ಎಲ್ಲರಿಗೂ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
