ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ದ್ವಿತೀಯ ಪಿಯುಸಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 13; ಕೊರಟಗೆರೆ ತಾಲ್ಲೂಕಿನಲ್ಲಿ 1; ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲ್ಲೂಕಿನಲ್ಲಿ ತಲಾ 2; ಕುಣಿಗಲ್, ತಿಪಟೂರು, ಪಾವಗಡ ತಾಲ್ಲೂಕಿನಲ್ಲಿ ತಲಾ 3; ಶಿರಾ ತಾಲ್ಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ, ಪರೀಕ್ಷೆಗೆ ಸಂಬAಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು. ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು.
ನಿಯೋಜಿಸಿರುವ ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ಪರೀಕ್ಷಾ ಅಕ್ರಮವನ್ನು ತಡೆಯಲು ಮುಖ್ಯ ಅಧೀಕ್ಷಕರನ್ನು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಹಾಯಕರನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಿಸಲು ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ಅವರಿಗೆ ನಿರ್ದೇಶನ ನೀಡಿದರು.
ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಬಾಲ ಗುರುಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 24,378 ಹೊಸ ವಿದ್ಯಾರ್ಥಿಗಳು, 318 ಪುನರಾವರ್ತಿತ, 1067 ಖಾಸಗಿ ಹಾಗೂ 5 ಫಲಿತಾಂಶ ಸುಧಾರಣೆ ವಿದ್ಯಾರ್ಥಿಗಳು ಸೇರಿ ಒಟ್ಟು 25,768 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 9088 ವಿಜ್ಞಾನ, 10217 ವಾಣಿಜ್ಯ ಹಾಗೂ 5977 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣಿಸಲು ಹಾಗೂ ವಿತರಿಸಲು ಅಪರ ಜಿಲ್ಲಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಜಿಲ್ಲಾ ಖಜಾನೆ ಉಪನಿರ್ದೇಶಕರನ್ನೊಳಗೊಂಡ ತ್ರಿಸದಸ್ಯ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಉಮಾ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್, ವಿವಿಧ ತಾಲ್ಲೂಕಿನ ತಹಶೀಲ್ದಾರರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೀಕ್ಷಾ ವೇಳಾಪಟ್ಟಿ :
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ವೇಳಾಪಟ್ಟಿಯನ್ವಯ ಮಾರ್ಚ್ 1ರಂದು ಕನ್ನಡ ಮತ್ತು ಅರೇಬಿಕ್; ಮಾ. 3ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ; ಮಾ.4ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್; ಮಾ. 5ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ: ಮಾ.7ರಂದು ಇತಿಹಾಸ, ಭೌತಶಾಸ್ತ್ರ; ಮಾ.10ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತç, ಭೂಗರ್ಭಶಾಸ್ತç, ಗೃಹವಿಜ್ಞಾನ; ಮಾ.12ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ; ಮಾ.13ರಂದು ಅರ್ಥಶಾಸ್ತ್ರ; ಮಾ.15ರಂದು ಇಂಗ್ಲೀಷ್; ಮಾ.17ರಂದು ಭೂಗೋಳ ಶಾಸ್ತ್ರ; ಮಾ.18ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ ಹಾಗೂ ಗಣಕ ವಿಜ್ಞಾನ; ಮಾ.19ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್; ಮಾ.20ರಂದು ಹಿಂದಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರ ವಿವರ:
ತುಮಕೂರಿನ ಬಿ.ಹೆಚ್.ರಸ್ತೆ ಸಿದ್ಧಗಂಗಾ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸಿದ್ದಗಂಗಾ ಬಾಲಕಿಯರ ಪದವಿ ಪೂರ್ವ ಕಾಲೇಜು; ಪಿಬಿ ರಸ್ತೆಯ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು; ಅಶೋಕ ರಸ್ತೆಯ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು; ಹೊರಪೇಟೆಯ ಸರ್ವೋದಯ ಪದವಿ ಪೂರ್ವ ಕಾಲೇಜು ಹಾಗೂ ಬಾಪೂಜಿ ಪದವಿ ಪೂರ್ವ ಕಾಲೇಜು; ಎಸ್ ಐಟಿ ಬಡಾವಣೆಯ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜು ಹಾಗೂ ವಾಸವಿ ಪದವಿ ಪೂರ್ವ ಕಾಲೇಜು; ಕಾಳಿದಾಸ ಪದವಿ ಪೂರ್ವ ಕಾಲೇಜು; ಸೋಮೇಶ್ವರ ಬಡಾವಣೆಯ ಇಂದಿರಾ ಪದವಿ ಪೂರ್ವ ಕಾಲೇಜು; ಬೆಳ್ಳಾವಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗವಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜು.
ತಿಪಟೂರಿನ ಕಲ್ಪತರು ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು.
ತುರುವೇಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು.
ಶಿರಾ ತಾಲೂಕಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಶ್ರೀ ಕೆ.ಎಂ.ಎA. ರಂಗನಾಥ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪಟ್ಟನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು.
ಮಧುಗಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ರಾಘವೆಂದ್ರ ವಿಜ್ಞಾನ ಪದವಿ ಪೂರ್ವ ಕಾಲೇಜು.
ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು.
ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜು, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಹಾಗೂ ಶಾಂತಿ ಎಸ್.ಎಸ್.ಕೆ. ಪದವಿ ಪೂರ್ವ ಕಾಲೇಜು.
ಕುಣಿಗಲ್ ತಾಲೂಕಿನ ಸರ್ಕಾರಿ ಎಂ.ಜಿ. ಪದವಿ ಪೂರ್ವ ಕಾಲೇಜು, ದೊಡ್ಡಪೇಟೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಎಡೆಯೂರಿನ ಶ್ರೀ ಸಿದ್ದಲಿಂಗೇಶ್ವರ ಪದವಿ ಪೂರ್ವ ಕಾಲೇಜು.
ಗುಬ್ಬಿ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಿಟ್ಟೂರಿನ ವಿನಾಯಕ ಪದವಿ ಪೂರ್ವ ಕಾಲೇಜು.
ಚಿಕ್ಕನಾಯಕನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಳಿಯಾರು ಹೋಬಳಿ ಕೆಂಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4