ಬೀದರ್: ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಔರಾದ(ಬಿ) ತಾಲೂಕಿನ ಸಾರ್ವಜನಿಕರ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಔರಾದ(ಬಿ) ಪಟ್ಟಣದಲ್ಲಿ ತಾಲೂಕಿನ ಸಾರ್ವಜನಿಕರ ಕುಂದು ಕೊರತೆಗಳ ಜನಸ್ಪಂದನ ಸಭೆ ಮತ್ತು ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಚಾಲನೆ ನೀಡಿದರು.
ಸಚಿವರಾದ ಈಶ್ವರ ಖಂಡ್ರೆ ಅವರು ಸಾರ್ವಜನಿಕರ ಕುಂದು ಕೊರತೆಗಳು, ಅಹವಾಲುಗಳನ್ನು ಆಲಿಸಿ ಅವರ ನ್ಯಾಯಯುತವಾದ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.
ಔರಾದ(ಬಿ) ಪಟ್ಟಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸುಮಾರು 167 ಅರ್ಜಿಗಳು ಬಂದಿದ್ದು, ಹಲವು ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲಿಯೇ ಪರಿಹಾರ ನೀಡಿದರು. ಇನ್ನುಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್


