ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧಪೀಡಿತ ಪ್ರದೇಶದಲ್ಲಿ ಕನ್ನಡಿಗರು ಮಾತ್ರವಲ್ಲದೆ ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳ ಜನರು ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.
ಕರ್ನಾಟಕದ ಇಬ್ಬರು ಶಾಸಕರಾದ ಬೋಜೇಗೌಡ ಮತ್ತು ಎ.ಸಿ. ಶ್ರೀನಿವಾಸ್ ಅವರು ಕೂಡ ಅಲ್ಲಿ ಸಿಲುಕಿಕೊಂಡಿದ್ದು, ಅವರ ಸಂಪರ್ಕಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ದೆಹಲಿಯ ಕರ್ನಾಟಕ ಭವನದ ಕಮಿಷನರ್ ಅವರಿಗೆ ವಿದೇಶಾಂಗ ಇಲಾಖೆಯೊಂದಿಗೆ ಸತತ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯು ವಿದೇಶಾಂಗ ಇಲಾಖೆಯ ಮೂಲಕವೇ ನಡೆಯಬೇಕಿರುವುದರಿಂದ ರಾಜ್ಯ ಸರ್ಕಾರ ಅವರಿಗೆ ಅಗತ್ಯ ಸಹಕಾರ ನೀಡುತ್ತಿದೆ ಎಂದರು.
ಇನ್ನೂ, ಇರಾನ್ ನಲ್ಲಿ ಮಕ್ಕಳ ಶಾಲೆಯ ಮೇಲೆ ನಡೆದಿರುವ ದಾಳಿಯನ್ನು ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಯುದ್ಧ ಯಾವುದಕ್ಕೂ ಪರಿಹಾರವಲ್ಲ, ನಮ್ಮದು ಶಾಂತಿಯನ್ನು ಬಯಸುವ ದೇಶ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಧೈರ್ಯ ತುಂಬುವ ಕೆಲಸ: ಯುದ್ಧದ ತೀವ್ರತೆಯಿಂದಾಗಿ ಮತ್ತು ರಾತ್ರಿ ನಡೆದ ಏರ್ ಸ್ಟ್ರೈಕ್ನಿಂದಾಗಿ ಅಲ್ಲಿರುವವರು ಆತಂಕಗೊಂಡಿದ್ದಾರೆ. ವಿದೇಶದಲ್ಲಿರುವ ಕನ್ನಡಿಗರಿಗೆ ಮತ್ತು ಅವರ ಕುಟುಂಬದವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಕನ್ನಡ ಸಂಘಟನೆಗಳು ಮಾಡಬೇಕು ಎಂದು ಅವರು ಮನವಿ ಮಾಡಿದರು.
“ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ಕೆಲಸ ಮಾಡುತ್ತೇವೆ,” ಎಂದು ಡಿಸಿಎಂ ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


