ಬೆಂಗಳೂರು: ಇಸ್ರೋ ವಿಜ್ಞಾನಿಗಳನ್ನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸನ್ಮಾನಿಸಲಾಗುವುದು. ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾರ್ಯಕ್ರಮದ ರೂಪ ರೇಷೆಗಳ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು.
ವಿಕಾಸಸೌಧಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಚಂದ್ರಯಾನ – ೩ ರ ಸಫಲತೆಗೆ ಕಾರಣೀಭೂತರಾದ ವಿಜ್ಞಾನಿಗಳನ್ನು ರಾಜ್ಯ ಸರಕಾರದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದೇನೆ. ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳು ಹೇಗಿರಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಯಿತು.
ಇಸ್ರೋ ಮುಖ್ಯಸ್ಥರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಿ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದ ಸಮಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಅಂತರಿಕ್ಷ ಕ್ಷೇತ್ರದಲ್ಲಿ ಭಾರತದ ದೇಶದ ಸಾಧನೆ ಪ್ರದರ್ಶನವನ್ನು ಆಯೋಜಿಸುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.


