ಬೆಂಗಳೂರು: ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು “ನೈಸ್ ಟೋಲ್ ಕಟ್ಟಬೇಡಿ” ಎಂದು ಸಾರ್ವಜನಿಕರಿಗೆ ಪ್ರಚೋದನೆ ನೀಡುತ್ತಿರುವುದು ಸರಿಯಲ್ಲ ಎಂದು ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, “ಜವಾಬ್ದಾರಿಯುತ ಕೇಂದ್ರ ಸಚಿವರ ಸ್ಥಾನದಲ್ಲಿರುವವರು ಜನರಿಗೆ ಕಾನೂನುಬಾಹಿರ ಕೆಲಸಕ್ಕೆ ಪ್ರಚೋದನೆ ನೀಡಬಾರದು. ನೈಸ್ ಟೋಲ್ (NICE Toll) ವಿಚಾರದಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ನ್ಯಾಯಾಲಯದ ಮೂಲಕ ಅಥವಾ ಕೇಂದ್ರ ಸರ್ಕಾರದಲ್ಲೇ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಸಾರ್ವಜನಿಕರಿಗೆ ಟೋಲ್ ಪಾವತಿಸಬೇಡಿ ಎಂದು ಹೇಳುವುದು ಸರಿಯಲ್ಲ” ಎಂದು ಕಿಡಿಕಾರಿದರು.
ಇನ್ನೂ ಮಾಜಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಪಕ್ಷದಲ್ಲಿ ತಮ್ಮ ನಾಯಕತ್ವ ಹಾಗೂ ಸ್ಥಾನಗಳನ್ನು ಉಳಿಸಿಕೊಳ್ಳಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಐಡಿ ಹಾಗೂ ಎಸ್ ಐಟಿ ತನಿಖೆಯಲ್ಲಿ ನಾಗೇಂದ್ರ ಅವರ ಹೆಸರು ಎಲ್ಲೂ ಉಲ್ಲೇಖವಾಗಿಲ್ಲ. ಬಿಜೆಪಿಯವರ ಬಳಿ ನಾಗೇಂದ್ರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಅದನ್ನು ಬಹಿರಂಗಪಡಿಸಲಿ. ಸದನದಲ್ಲಿ ಈ ವಿಷಯದ ಕುರಿತು ಚರ್ಚಿಸಲು ಅವರಿಗೆ ಸುವರ್ಣ ಅವಕಾಶವಿತ್ತು. ಆದರೆ ಅವರ ಬಳಿ ಯಾವುದೇ ಪುರಾವೆಗಳಿಲ್ಲದ ಕಾರಣ ಚರ್ಚೆಯಿಂದ ಓಡಿಹೋಗಿ ಹೊರಗೆ ಗದ್ದಲ ಮಾಡುತ್ತಿದ್ದಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
