ಮಧುಗಿರಿ : ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಯನ್ನೂ ಗುರುತಿಸಿ ಗೌರವಿಸುವುದು ಉತ್ತಮ ಸಮಾಜದ ಲಕ್ಷಣವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಮಿಕರ ಪರಿಶ್ರಮವನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.
ತಾಲ್ಲೂಕಿನ ಪುರವರ ಹೋಬಳಿಯ ತಗ್ಗಿಹಳ್ಳಿಯ ಶ್ರೀರಾಮಕೃಷ್ಣ ಆಶ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಆಶ್ರಮದ ಸ್ವಚ್ಛತೆ ಸೇರಿದಂತೆ ವಿವಿಧ ಕೆಲಸಗಳನ್ನು ನಿಷ್ಠೆಯಿಂದ ನಿರ್ವಹಿಸುತ್ತಿರುವ ಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಅವರ ಪರಿಶ್ರಮವನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಆಶ್ರಮದ ವಿವಿಧ ಸೇವಾ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ತಮ್ಮ ಅಳಿಲು ಸೇವೆಯನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಶ್ರಮದ ಶ್ರೀ ರಮಾನಂದ ಚೈತನ್ಯ ಸ್ವಾಮೀಜಿ ಮಾತನಾಡಿ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಮುರಳೀಧರ ಹಾಲಪ್ಪ ಅವರ ಗುಣ ಮತ್ತು ಸೇವಾ ಮನೋಭಾವ ಮೆಚ್ಚುವಂತದ್ದು. ರಾಜಕೀಯ ವಿಚಾರಗಳನ್ನು ಹೊರತುಪಡಿಸಿ ಅವರ ವ್ಯಕ್ತಿತ್ವ ಹಾಗೂ ಸಮಾಜಸೇವೆಯ ಬದ್ಧತೆ ಪ್ರಶಂಸನೀಯವಾಗಿದೆ. ಹಾಲಪ್ಪ ಪ್ರತಿಷ್ಠಾನದ ಮೂಲಕ ಇನ್ನಷ್ಟು ಜನಪರ ಸೇವಾ ಕಾರ್ಯಗಳು ಮುಂದುವರಿಯಲಿ. ಅವರಿಗೆ ರಾಜಕೀಯ ಕ್ಷೇತ್ರದಲ್ಲಿಯೂ ಉತ್ತಮ ಭವಿಷ್ಯ ಲಭಿಸಲಿ ಎಂದು ಆಶೀರ್ವದಿಸಿದರು.
ಕಳೆದ ಐದು ದಶಕಗಳಿಂದ ಶ್ರೀಮಠವು ತನ್ನ ಶಕ್ತ್ಯಾನುಸಾರ ವಿವಿಧ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ವಿಶೇಷವಾಗಿ ಸುತ್ತಮುತ್ತಲಿನ 20 ಸರ್ಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿದೆ. ಉತ್ತರ ಪ್ರದೇಶದಿಂದ ಆಗಮಿಸಿರುವ ಕಾಶ್ಮಿಕ್ ಮಹಾರಾಜರು ಆಶ್ರಮದ ಸೇವಾ ಕಾರ್ಯಗಳಿಗೆ ಬೆನ್ನೆಲುಬಾಗಿ ನಿಂತಿದ್ದು, ಇಂದು ಆಶ್ರಮಕ್ಕೆ ಆಗಮಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಶ್ರಮದ ಭಕ್ತರು, ಗ್ರಾಮ ಪಂಚಾಯಿತಿ ಕಾರ್ಮಿಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
