ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಸ್ಪಂದನ ಕಾರ್ಯಕ್ರಮ ಮೂಲಕ ಜನರ ಸಮಸ್ಯೆ ಪರಿಹರಿಸುವುದು ಉದ್ದೇಶವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಪ್ರಮುಖವಾಗಿದೆ ಎಂದರು.
ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ. ಸಾಧ್ಯವಾದಷ್ಟು ಸರ್ಕಾರದ ಕೆಲಸಗಳನ್ನು ತಲುಪಿದಲ್ಲಿ ಸಾರ್ಥಕವಾಗಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಯಾವುದೇ ರೀತಿಯ ಕುಂದುಕೊರತೆ ಇದ್ದಲ್ಲಿ ಮನವಿ ಮಾಡುವಂತಾಗಬೇಕು. ಬಗೆಹರಿಸುವಂತಹಗಳನ್ನು ಸ್ಥಳದಲ್ಲಿಯೇ ತಿಳಿಸಲಾಗುವುದು. ಇಲ್ಲದಿದ್ದಲ್ಲಿ 15 ದಿನದೊಳಗೆ ಬಗೆಹರಿಸಲಾಗುವುದು ಎಂದರು.
ಸಾರ್ವಜನಿಕರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಜನಸ್ಪಂದನ ಸಭೆಯ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಐಟಿಡಿಪಿ, ಲೀಡ್ ಬ್ಯಾಂಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಂಚಾಯತ್ ರಾಜ್, ಪಶುಪಾಲನೆ ಸೇರಿದಂತೆ ಹೀಗೆ ವಿವಿಧ ಇಲಾಖೆಗಳಿಂದ ಮಾಹಿತಿ ಮಳಿಗೆ ನಿರ್ಮಾಣ ಮಾಡಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ವಿರಾಜಪೇಟೆ ಪಟ್ಟಣದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಸುಮಾರು 126 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.
ವಿರಾಜಪೇಟೆ ಪುರಸಭೆಗೆ ಸಂಬಂಧಿಸಿದಂತೆ 55 ಅರ್ಜಿಗಳು, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 25 ಅರ್ಜಿಗಳು, ಗ್ರಾಮ ಪಂಚಾಯಿತಿ ಸಂಬಂಧಪಟ್ಟಂತೆ 10 ಅರ್ಜಿಗಳು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 8 ಅರ್ಜಿಗಳು, ಭೂ ದಾಖಲೆಗಳ ಇಲಾಖೆಗೆ ಸಂಬಂಧಿಸಿದಂತೆ 7 ಅರ್ಜಿಗಳು, ಅರಣ್ಯ ಇಲಾಖೆ ಹಾಗೂ ಸೆಸ್ಕ್ ಸಂಬಂಧಿಸಿದಂತೆ ತಲಾ 3 ಅರ್ಜಿಗಳು, ಜಿ.ಪಂ., ಕೆಎಸ್‍ಆರ್‍ಟಿಸಿ ಪೊಲೀಸ್ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ತಲಾ 2 ಅರ್ಜಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಲೀಡ್ ಬ್ಯಾಂಕ್, ಕಂದಾಯ ಮತ್ತು ಅರಣ್ಯ, ಪ್ರಾದೇಶಿಕ ಸಾರಿಗೆ, ಪ್ರವಾಸೋದ್ಯಮ ತಲಾ 1 ಅರ್ಜಿಗಳು ಸೇರಿದಂತೆ ಒಟ್ಟು 126 ಅರ್ಜಿಗಳು ಸಲ್ಲಿಕೆಯಾದವು.
ಅಹವಾಲು ಸ್ವೀಕಾರ ಸಂದರ್ಭದಲ್ಲಿ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೆÇನ್ನಣ್ಣ ಅವರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕುಂದುಕೊರತೆಯನ್ನು ಪರಿಹರಿಸುವಂತೆ ಎ.ಎಸ್.ಪೊನ್ನಣ್ಣ ಅವರು ಸ್ಪಷ್ಟ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡವರ ಶ್ರೇಯೋಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವತ್ತ ಗಮನಹರಿಸಬೇಕು ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಲಹೆ ಮಾಡಿದರು.
ಸರ್ಕಾರ ಎಲ್ಲಾ ಜನರ ಏಳಿಗೆಗೆ ಒಂದಲ್ಲ ಒಂದು ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಯಾರೂ ಸಹ ಮುಖ್ಯವಾಹಿನಿಯಿಂದ ದೂರ ಇರಬಾರದು. ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಮುನ್ನಡೆಯಬೇಕು ಎಂದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಪುರಸಭೆ ಸದಸ್ಯರು, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇತರರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


