ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷಕ್ಕಿಲ್ಲ. ಗೃಹ ಸಚಿವರು ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದಲೇ ಈ ಹಗರಣದ ತನಿಖೆ ಉತ್ತಮವಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಪಿಎಸ್ ಐ ನೇಮಕಾತಿ ಅಕ್ರಮ ಗೊತ್ತಾಗುತ್ತಿದ್ದಂತೆಯೇ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಿಐಡಿ ತನಿಖೆಗೆ ಆದೇಶಿಸಿ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಯಲಿಗೆಳೆಯುವ ಕೆಲಸ ಮಾಡಿದ್ದಾರೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು.
ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗೃಹ ಸಚಿವರ ರಾಜೀನಾಮೆ ಕೇಳುವ ಹಕ್ಕಿಲ್ಲ. ಗೃಹ ಸಚಿವರು ತೋರಿದ ಆಸಕ್ತಿ, ದಕ್ಷತೆಯಿಂದಲೇ ಈ ಪ್ರಕರಣ ಇಲ್ಲಿಯವರೆಗೆ ಬಂದಿದೆ ಎಂದರು.
ಕಾಂಗ್ರೆಸ್ ಅಧಿಕಾರಾವಧಿಯಲ್ಲೇ ಪಿಎಸ್ ಐ ಹಗರಣ ಆಗಿತ್ತು. ಪ್ರಶ್ನೆಪತ್ರಿಕೆ ಬಹಿರಂಗಗೊಂಡಿತ್ತು. ಹಿರಿಯ ಅಧಿಕಾರಿ ಆರೋಪಿಯಾಗಿದ್ದರೂ ಆಗ ಯಾವುದೇ ಕ್ರಮಕೈಗೊಂಡಿರಲಿಲ್ಲ. ನಮ್ಮ ಅಧಿಕಾರಿಗಳಿಗೆ ಸಂಪೂರ್ಣ ಸ್ವತಂತ್ರ ನೀಡಿದ್ದೇವೆ. ನಮ್ಮದು ಜೀರೋ ಟಾಲರೆನ್ಸ್ ಯಾವುದನ್ನೂ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುತ್ತಿತ್ತು ಎಂದು ಮುಖ್ಯಮಂತ್ರಿಗಳು ಕಿಡಿಕಾರಿದರು.
ಪಿಎಸ್ ಐ ಅಕ್ರಮ ನೇಮಕಾತಿ ಹಗರಣದಲ್ಲಿ ಇನ್ನೂ ಪ್ರಭಾವಿಗಳಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರು ಗಾಳಿಯಲ್ಲಿ ಗುಂಡು ಹೊಡೆಯುವ ರೀತಿಯಲ್ಲಿ ಮಾತನಾಡಿದರೆ ಪ್ರಯೋಜನವಿಲ್ಲ ಎಂದರು.
ಈ ಹಗರಣದಲ್ಲಿ ಯಾರು ಕಿಂಗ್ ಪಿನ್ ಇದ್ದಾರೆ ಎಂಬುದನ್ನು ಕುಮಾರಸ್ವಾಮಿ ಅವರು ಬಹಿರಂಗಪಡಿಸಲಿ. ಆಧಾರರಹಿತ ಆರೋಪ ಮಾಡುವುದು ಕುಮಾರಸ್ವಾಮಿ ಅವರಿಗೆ ರೂಢಿಯಾಗಿದೆ ಅವರ ಬಳಿ ಮಾಹಿತಿ ಇದ್ದರೆ ಹೇಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


