ಔರಾದ್: ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಹಾಗೂ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭಂಡಾರಕುಮಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯ ವಿವಿಧ ಸೌಲಭ್ಯಗಳ ಕುರಿತು ಗ್ರಾಮಸ್ಥರಿಗೆ ಸಮಗ್ರ ಮಾಹಿತಿ ನೀಡಲಾಯಿತು.
ಗ್ರಾಮೀಣ ಕುಟುಂಬಗಳಿಗೆ ಈ ಹಿಂದೆ ಇದ್ದ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಅರ್ಹ ಕುಟುಂಬಗಳು ಇದರ ಗರಿಷ್ಠ ಪ್ರಯೋಜನ ಪಡೆದುಕೊಳ್ಳಬಹುದು. ಕಷ್ಟಪಟ್ಟು ಕೆಲಸ ಮಾಡುವ ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಉದ್ದೇಶದಿಂದ ದಿನದ ಕೂಲಿ ಮೊತ್ತವನ್ನು ರೂ. 370 ರಿಂದ ರೂ. 382 ಕ್ಕೆ ಹೆಚ್ಚಿಸಲಾಗಿದೆ. ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳು ಕೆಲಸದ ಅಗತ್ಯವಿದ್ದಾಗ ನೇರವಾಗಿ ಗ್ರಾಮ ಪಂಚಾಯಿತಿಗೆ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಬೇಕು. ಇದುವರೆಗೆ ಜಾಬ್ ಕಾರ್ಡ್ ಇಲ್ಲದ ಅರ್ಹ ಕುಟುಂಬಗಳು ಕೂಡಲೇ ಹೊಸ ಜಾಬ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿ ಸರ್ಕಾರದ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಲಾಯಿತು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಮಾತನಾಡಿ, “ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಸರ್ಕಾರದ ಸೌಲಭ್ಯಗಳು ತಲುಪಬೇಕು. ಗ್ರಾಮಸ್ಥರು ಸಂಪೂರ್ಣ ಮಾಹಿತಿ ತಿಳಿದುಕೊಂಡು ತಮ್ಮ ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಪಿಡಿಒ ಮಲ್ಲಿಕಾರ್ಜುನ ಎ. ಪಾಟೀಲ್, ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಂತ್ರಿಕ ಸಹಾಯಕರಾದ ಅಮರ್, ಸಂದೀಪ್, ಹಣಮಂತ ಮೇತ್ರೆ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಡಿಇಒ ಎಜಾಜುಲ್ ಹಕ್, ದತ್ತಾತ್ರಿ, ಎನ್.ಆರ್.ಎಲ್.ಎಂ (NRLM) ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
