ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಘೋಷಿಸಿದ್ದಾರೆ. “ನಾನು ಯಾವತ್ತೂ ಅಧಿಕಾರವನ್ನು ಹುಡುಕಿಕೊಂಡು ಹೋದವನಲ್ಲ. ಸಚಿವನಾಗಿದ್ದಾಗಲೇ ನನಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿ ಪದವಿ ಬಿಡಲು ಸಿದ್ಧ ಎಂದು ಹೇಳಿದ್ದೆ. ಈಗ ನನ್ನ ಬಳಿ ಬಿಡಲು ಯಾವುದೇ ಅಧಿಕಾರವಿಲ್ಲ. ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುತ್ತೇನೆ” ಎಂದು ತಿಳಿಸಿದರು.
ಈಗಾಗಲೇ ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿರುವುದಾಗಿ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆಯಾದಲ್ಲಿ ಸಚಿವರಾಗುವ ಆಸೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಸಚಿವನಾದರೂ ಅಥವಾ ಇಲ್ಲದಿದ್ದರೂ ನಾನು ಸದಾ ಜನರ ಜೊತೆಗೇ ಇರುತ್ತೇನೆ. ನನ್ನ ಕಾರ್ಯವೈಖರಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ” ಎಂದರು.
ಕೆ.ಎನ್. ರಾಜಣ್ಣ ಅವರ ಈ ಹೇಳಿಕೆಯು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಕೆಪಿಸಿಸಿ ಸಾರಥ್ಯ ಯಾರಿಗೆ ಸಿಗಲಿದೆ ಎಂಬ ಕುತೂಹಲಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


