ಬೆಳಗಾವಿ: ಕಲ್ಯಾಣ ಕರ್ನಾಟಕದ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಮಲತಾಯಿ ಧೋರಣೆ ಅನುಸರಿಸುವ ಮೂಲಕ ಘನಘೋರ ಅನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕ ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ನಡೆಯಬೇಕೆಂದು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಆದರೆ, ಅದರ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ, ಕಳೆದ ಅಧಿವೇಶನದಲ್ಲಿ 10 ದಿನದೊಳಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾಡುವುದಾಗಿ ಮುಖ್ಯಮಂತ್ರಿ ಮಾತು ಕೊಟ್ಟಿದ್ದರು. ಮೂರು ತಿಂಗಳು ಕಳೆದರೂ ಮಂಡಳಿ ರಚನೆಯಾಗಿಲ್ಲ ಎಂದು ಆರೋಪಿಸಿದರು.
ಉತ್ತರ ಕರ್ನಾಟಕ ಅಭಿವೃದ್ಧಿಗೆ ಬಜೆಟ್ ನಲ್ಲಿ 1500 ಕೋಟಿ ರೂ. ಒದಗಿಸಿದ್ದು, 125 ಕೋಟಿ ಮಾತ್ರ ಖರ್ಚಾಗಿದೆ ಎಂದು ಆರೋಪಿಸಿದ ಅವರು, ಕಲ್ಯಾಣ ಕರ್ನಾಟಕವನ್ನು 2ನೇ ದರ್ಜೆಯ ನಾಯಕರಂತೆ ಪರಿಗಣಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೋರಾಟ ಮಾಡುತ್ತೇವೆ. ಅನವಶ್ಯಕ ಕಾಯ್ದೆ ತಂದು ಆಡಳಿತ ವೈಫಲ್ಯ ಮುಚ್ಚಿ ಹಾಕುವ ಪ್ರಯತ್ನ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಅವರು ಟೀಕಿಸಿದರು.