ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ 27ರಂದು ಸಂತ ಶ್ರೇಷ್ಠ ಕನಕದಾಸರ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ನವೆಂಬರ್ 19ರಂದು ನಡೆದ ಜಯಂತ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ ಶಿರಾಗೇಟ್‌ನ ಕನಕ ವೃತ್ತದಿಂದ ಅಲಂಕೃತ ಮೆರವಣಿಗೆ ಆರಂಭವಾಗಲಿದ್ದು, ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಲಿವೆ. ಕುರುಬ ಸಮುದಾಯದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದು, ಮೆರವಣಿಗೆಯು ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಸಾಗಲಿದೆ.
ನಂತರ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕನಕದಾಸರ ಜೀವನ, ಸಾಹಿತ್ಯ ಹಾಗೂ ಸಮಾಜಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಸಮಾಜ ಮತ್ತು ಸಮುದಾಯದ ಅಭಿವೃದ್ಧಿಗೆ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಸನ್ಮಾನಿಸಲಾಗುವುದು.
ಜಯಂತ್ಯೋತ್ಸವ ಯಶಸ್ವಿಯಾಗಿ ನಡೆಯಲು ಮೆರವಣಿಗೆ, ವೇದಿಕೆ ಕಾರ್ಯಕ್ರಮ, ಕುಡಿಯುವ ನೀರು, ಸ್ವಚ್ಛತೆ, ಭದ್ರತೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ಜಯಂತ್ಯೋತ್ಸವದ ಯಶಸ್ವಿ ಆಚರಣೆಗೆ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಇಲಾಖಾವಾರು ಜವಾಬ್ದಾರಿಗಳ ಕುರಿತು ಚರ್ಚಿಸಲಾಯಿತು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
