ಕರ್ನಾಟಕದಲ್ಲಿ ಪ್ರೀತಿ ಗೆದ್ದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದ್ವೇಷವನ್ನು ರಾಜ್ಯದಿಂದ ನಿರ್ಮೂಲನೆ ಮಾಡಲಾಯಿತು. ಕರ್ನಾಟಕ ಸರ್ಕಾರದ ಮೊದಲ ಸಂಪುಟ ಸಭೆ ಮುಗಿದ ಕೂಡಲೇ ಕಾಂಗ್ರೆಸ್ ನೀಡಿರುವ ಐದು ಭರವಸೆಗಳನ್ನು ಜಾರಿಗೆ ತರಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.
ಕಾಂಗ್ರೆಸ್ ನಿಮಗೆ ಐದು ಭರವಸೆಗಳನ್ನು ನೀಡಿದೆ. ಕಾಂಗ್ರೆಸ್ ಕೇವಲ ಬಾಯಿಗೆ ಬಂದಂತೆ ಮಾತನಾಡುವುದಿಲ್ಲ ಎಂದು ಹೇಳಿದ್ದೇನೆ. ನಾವು ಹೇಳಿದ್ದನ್ನು ಮಾಡುತ್ತೇವೆ. ಇನ್ನು 1-2 ಗಂಟೆಗಳಲ್ಲಿ ಕರ್ನಾಟಕ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಈ ಐದು ಭರವಸೆಗಳು ಕಾನೂನಾಗಲಿವೆ. ನಾವು ನಿಮಗೆ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡುತ್ತೇವೆ ಎಂದು ರಾಹುಲ್ ಹೇಳಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಇಬ್ಬರೂ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಗಾಂಧಿ ಕುಟುಂಬದ ಸದಸ್ಯರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


