ಕೊರಟಗೆರೆ: ಮನೆಯ ಮುಂದೆ ನಿಲ್ಲಿಸಿದ್ದ ಕಾರು ಮತ್ತು ಬೈಕ್ ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ವೈದ್ಯನನ್ನು ಕೊರಟಗೆರೆ ತಾಲೂಕಿನ ಕೋಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಡಾ.ಎಚ್.ಆರ್.ನಾಗಭೂಷಣ್ ಎಂದು ಗುರುತಿಸಲಾಗಿದೆ. ಈತ ತಾಲೂಕಿನ ಬುಕ್ಕಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕೆಲಸ ಮಾಡುತ್ತಿದ್ದನು. ಏಪ್ರಿಲ್ 11ರ ಶನಿವಾರ ತಡರಾತ್ರಿ, ಕೋಳಾಲ ಗ್ರಾಮದ ವಿರೂಪಾಕ್ಷಪ್ಪ ಎಂಬುವವರ ಮನೆಯ ಮುಂದೆ ನಿಲ್ಲಿಸಲಾಗಿದ್ದ ಒಂದು ಕಾರು, ಒಂದು ಬೈಕ್ ಹಾಗೂ ಎಲೆಕ್ಟ್ರಿಕ್ ಸ್ಕೂಟರ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದನು.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವ ಆರೋಪಿ, ಯಾರಿಗೂ ಗುರುತು ಸಿಗದಂತೆ ಮುಖಕ್ಕೆ ಮುಸುಕು ಹಾಕಿಕೊಂಡು ಬಂದಿದ್ದನು. ಆದರೆ, ಘಟನೆಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಈ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಿದ ಕೋಳಾಲ ಪಿಎಸ್ಐ ಅಭಿಷೇಕ್ ನೇತೃತ್ವದ ತಂಡವು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪ್ರಸ್ತುತ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


