ಕೊರಟಗೆರೆ : ತಾಲ್ಲೂಕಿನಾದ್ಯಂತ ಮಾನವ ಹಕ್ಕುಗಳ ರಕ್ಷಣೆಯ ಜಾಗೃತಿ ಮೂಡಿಸುವುದರ ಜತೆಗೆ ಸಂಘಟನೆಯನ್ನು ಗ್ರಾಮೀಣ ಮಟ್ಟದವರೆಗೆ ಬಲಪಡಿಸಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ ನಿರ್ಧರಿಸಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ (ರಿ.) ಕೊರಟಗೆರೆ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಮಿತಿಯ ರಾಜ್ಯಾಧ್ಯಕ್ಷ ಸತ್ಯಪ್ಪ ಮಧುಗಿರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ. ಕೃಷ್ಣಪ್ಪ ಅವರ ಸಮ್ಮುಖದಲ್ಲಿ ಸಭೆ ನಡೆಸಿ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ನೇಮಕಾತಿ ಆದೇಶ ಹೊರಡಿಸಲಾಯಿತು.
ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಸತ್ಯಪ್ಪ ಮಧುಗಿರಿ, ಸಮಾಜದ ಅಸಂಘಟಿತ ರೈತರು, ಕಾರ್ಮಿಕರು, ಭೂರಹಿತರು, ಕೃಷಿ ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ಸಮಿತಿಯ ಪದಾಧಿಕಾರಿಗಳು ನಿರಂತರವಾಗಿ ಶ್ರಮಿಸಬೇಕು. ಶಿಕ್ಷಣ ಮತ್ತು ಸಂಘಟನೆಯ ಮೂಲಕ ಸಾಮಾಜಿಕ ನ್ಯಾಯ ಹಾಗೂ ಸಾಮರಸ್ಯವನ್ನು ಕಾಪಾಡುವುದರ ಜತೆಗೆ ಸಂವಿಧಾನಬದ್ಧವಾಗಿ ಪ್ರತಿಯೊಬ್ಬರ ಮಾನವ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ವೈ. ಕೃಷ್ಣಪ್ಪ ಮಾತನಾಡಿ, ರಾಜ್ಯ, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಿ, ಸಮಿತಿಯ ಉದ್ದೇಶ ಮತ್ತು ಕಾರ್ಯಚಟುವಟಿಕೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ನೂತನ ಪದಾಧಿಕಾರಿಗಳು:
ತಾಲ್ಲೂಕು ಅಧ್ಯಕ್ಷರು : ಗಿರೀಶ್ ಜಿ.ಎಲ್.
ಪ್ರಧಾನ ಕಾರ್ಯದರ್ಶಿ : ಎ. ಗಂಗಾಧರ್
ಕಾರ್ಯಾಧ್ಯಕ್ಷರು : ಆನಂದಪ್ಪ
ಸಂಚಾಲಕರು : ಡಿ. ಶಂಕರ್
ಸಂಘಟನಾ ಕಾರ್ಯದರ್ಶಿಗಳು : ಬಿ. ವೀರಭದ್ರಯ್ಯ ಹಾಗೂ ರಾಜಣ್ಣ (ತೋವಿನಕೆರೆ)
ಜಂಟಿ ಕಾರ್ಯದರ್ಶಿ : ಎಂ.ಕೆ. ರಾಜಣ್ಣ.
ನೂತನ ತಾಲ್ಲೂಕು ಅಧ್ಯಕ್ಷ ಗಿರೀಶ್ ಜಿ.ಎಲ್. ಮಾತನಾಡಿ, ರಾಜ್ಯಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಮಾರ್ಗದರ್ಶನದಲ್ಲಿ ಸಮಿತಿಯ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲಾಗುವುದು. ತಾಲ್ಲೂಕಿನ ಪ್ರತಿಯೊಂದು ಗ್ರಾಮಕ್ಕೂ ಸಂಘಟನೆಯನ್ನು ವಿಸ್ತರಿಸಿ, ಬಡವರು, ಶೋಷಿತರು, ಮಹಿಳೆಯರು ಹಾಗೂ ರೈತರ ಮಾನವ ಹಕ್ಕುಗಳ ರಕ್ಷಣೆಗೆ ಬದ್ಧವಾಗಿ ಶ್ರಮಿಸಲಾಗುವುದು. ಯಾರೇ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾದರೂ ಅವರ ಪರವಾಗಿ ಧ್ವನಿ ಎತ್ತಿ, ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಎಲ್ಲ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಮುನ್ನಡೆಸಲಾಗುವುದು ಎಂದು ಹೇಳಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
