ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಎಂಬಿಕೆ , ಎಲ್ ಸಿ ಆರ್ ಪಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು, ಸಭೆಯಲ್ಲಿ ಗ್ರಾಮವಾರು ಇರುವ ಕೊಳವೆಬಾವಿಗಳಲ್ಲಿನ ನೀರಿನ ಲಭ್ಯತೆ, ಕುಡಿಯುವ ನೀರಿನ ವಿತರಣೆ ಹಾಗೂ ಜನರಿಗೆ ತೊಂದರೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಯಿತು.
ಬೇಸಿಗೆ ಹಿನ್ನೆಲೆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಯಿತು. ಇದೇ ವೇಳೆ ಇದೇ ತಿಂಗಳ 20ರಂದು ತುಮಕೂರು ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡುತ್ತಿರುವ ಹಿನ್ನೆಲೆ ನಡೆಯಲಿರುವ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಆಹ್ವಾನಿಸುವ ಕುರಿತು ಚರ್ಚೆ ನಡೆಯಿತು.
ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಬೂದಗವಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಗಂಗಾಧರಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘುನಂದನ ಪೂಜಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಿರಿಯ ಅಭಿಯಂತರ ಸುನಿಲ್, ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ರಮೇಶ್, ನಾಗಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
ಸಭೆಯ ನಂತರ ಅಧಿಕಾರಿಗಳು ನೇಗಲಾಲ ಗ್ರಾಮಕ್ಕೆ ಭೇಟಿ ನೀಡಿ, ಹೊಸದಾಗಿ ಕೊಳವೆಬಾವಿ ಕೊರೆಸಲು ಗುರುತಿಸಲಾದ ಸ್ಥಳವನ್ನು ಪರಿಶೀಲಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಅಗತ್ಯ ಕ್ರಮಗಳನ್ನು ಶೀಘ್ರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


