ಕೊರಟಗೆರೆ: ತಾಲೂಕಿನಲ್ಲಿ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಜ್ಯೋತ್ಸ್ನಾ ರೆಡ್ಡಿ ಕರೆ ನೀಡಿದರು.
ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊರಟಗೆರೆ ರೋಟರಿ ಕ್ಲಬ್ ಸಹಯೋಗದಲ್ಲಿ ಭಾನುವಾರ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿನಿಂದ ಮೂರು ದಿನಗಳ ಕಾಲ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ತಿಳಿಸಿದರು.
ಕೊರಟಗೆರೆ ರೋಟರಿ ಕ್ಲಬ್ ಅಧ್ಯಕ್ಷ ಎ.ಜಿ. ಮಂಜುನಾಥ್ ಮಾತನಾಡಿ, ರೋಟರಿ ಇಂಟರ್ ನ್ಯಾಷನಲ್ ಕಳೆದ 35 ವರ್ಷಗಳಿಂದ ‘ಎಂಡ್ ಪೋಲಿಯೋ ನೌ’ ಅಭಿಯಾನ ನಡೆಸುತ್ತಿದ್ದು, ತಾಲೂಕಿನ ಪ್ರತಿಯೊಂದು ಗ್ರಾಮ ಹಾಗೂ ಮನೆಗೆ ಭೇಟಿ ನೀಡಿ ಅಭಿಯಾನ ಯಶಸ್ವಿಗೊಳಿಸಲಾಗುವುದು ಎಂದರು.
ರೋಟರಿ ಚಾರ್ಟೆಡ್ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಸರ್ಕಾರದೊಂದಿಗೆ ಕೈಜೋಡಿಸಿ ಶೇ.100ರಷ್ಟು ಲಸಿಕಾ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಮಕೃಷ್ಣ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಮೂರು ದಿನಗಳ ಕಾಲ ಬೂತ್‌ಗಳಲ್ಲೂ ಹಾಗೂ ಮನೆ ಮನೆಗೂ ತೆರಳಿ ಲಸಿಕೆ ನೀಡಲಾಗುವುದು ಎಂದು ಹೇಳಿದರು.
ಡಾ. ರವೀಶ್ ಮಾತನಾಡಿ, ಪೋಲಿಯೋ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲ. ಒಂದೇ ಒಂದು ಮಗು ಲಸಿಕೆಯಿಂದ ವಂಚಿತವಾದರೂ ರೋಗ ಹರಡುವ ಅಪಾಯ ಇರುವುದರಿಂದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಧರ್, ತಾ.ಪಂ. ಇಒ ಗುರುಮೂರ್ತಿ, ಡಾ. ಆತ್ಮ ರಾಮ್ ಶೆಟ್ಟಿ, ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜು ಪಾಟೀಲ್, ರೋಟರಿ ನಿರ್ದೇಶಕ ಪ್ರಸನ್ನಕುಮಾರ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಪೋಲಿಯೋ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೋಷಕರು ಆರೋಗ್ಯ ಸಿಬ್ಬಂದಿಗೆ ಸಹಕರಿಸಿ, ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ. ತಾಲೂಕಿನ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 4 ಸಾರ್ವಜನಿಕ ಸ್ಥಳಗಳಲ್ಲಿ ಲಸಿಕಾ ಬೂತ್ ಗಳನ್ನು ತೆರೆಯಲಾಗಿದೆ. ಒಟ್ಟು 10,016 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
— ಡಾ.ಜ್ಯೋತ್ಸ್ನಾ ರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




