ತುಮಕೂರು: ತುಮಕೂರು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 27ರಂದು ಕರ್ನಾಟಕ ಲೋಕಸೇವಾ ಆಯೋಗವು 2023–24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಆಗಸ್ಟ್ 27ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q