ಬೆಂಗಳೂರು : ಸಿಎಂ ಆಗಿದ್ದಾಗಲೇ ತಾನು ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರಕ್ಕೆ ಏನೂ ಮಾಡದ ಕುಮಾರಣ್ಣ ಈಗ ಈ ಕ್ಷೇತ್ರದ ಶಾಸಕ ಸ್ಥಾನವೂ ಇಲ್ಲದಿರುವಾಗ ಅವರು ಏನು ತಾನೇ ಮಾಡಲು ಸಾಧ್ಯ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ನಾವು ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಕೆಲಸ ಮಾಡುತ್ತಿಲ್ಲ. ಅಲ್ಲಿ ಶಾಸಕ ಸ್ಥಾನ ತೆರವಾದಾಗಿನಿಂದಲೂ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಆ ಕ್ಷೇತ್ರದ ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಿ ಅವರ ಕಷ್ಟಗಳನ್ನು ಆಲಿಸಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಕೇಳಲು ಕಾರ್ಯಕ್ರಮ ಮಾಡಿದಾಗ ಸುಮಾರು 22 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ ಎಂದರು.
ತಮಗೆ ಮನೆ, ನಿವೇಶನ ನೀಡಿಲ್ಲ, ಬಗರ್ ಹುಕ್ಕುಂ ಸಾಗುವಳಿ ಸಭೆ ಮಾಡಿಲ್ಲ, ರಸ್ತೆ ಇಲ್ಲ. ನಮ್ಮ ಕಷ್ಟ ಕೇಳಲು ಈ ಹಿಂದೆ ಶಾಸಕರಾಗಿದ್ದ ಕುಮಾರಣ್ಣ ಬಂದಿಲ್ಲ ಎಂದು ಜನ ಸಮಸ್ಯೆ ಹೇಳಿಕೊಂಡರು.
ಈ ಹಿನ್ನೆಲೆಯಲ್ಲಿ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಚನ್ನಪಟ್ಟಣಕ್ಕೆ ₹500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ರಸ್ತೆ, ನೀರಾವರಿ ಯೋಜನೆಗೆ ಮುಂದಾಗಿದ್ದೇವೆ. ಇದರ ಜತೆಗೆ ಕ್ಷೇತ್ರದ ಜನರಿಗೆ 5 ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದೆ. ನಿವೇಶನ ಹಂಚಿಕೆ ಮಾಡಲು ಸರ್ಕಾರಿ ಜಾಗ ಗುರುತಿಸಿ ಬಡಾವಣೆ ನಿರ್ಮಾಣ ಕೆಲಸ ಮಾಡುತ್ತಿದ್ದೇವೆ. ಹಕ್ಕುಪತ್ರ ನೀಡುವ ಹಂತಕ್ಕೆ ಕೆಲಸ ಬಂದು ನಿಂತಿದೆ. ಇದರ ಜತೆಗೆ ಎಲ್ಲಾ ಗ್ರಾಮಗಳಲ್ಲಿ ಜಮೀನು ಖರೀದಿ ಮಾಡಲು ಮುಂದಾಗಿದ್ದೇವೆ ಎಂದು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296