ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಇದುವರೆಗೂ ಕೋವಿಡ್ ಲಸಿಕೆಯ ಅಭಿಯಾನ ಯಾವುದೇ ಲೋಪವಾಗದಂತೆ ಯಶಸ್ವಿಯಾಗಿದ್ದು, 15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ ಈ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಪೋಷಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಜಿ.ವೆಂಕಟೇಶ್ ಮನವಿ ಮಾಡಿದರು.
ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಗರಸಭೆ ಅಧ್ಯಕ್ಷರಾದ ಶಂಷುನ್ನೀಸಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರವು ಲಸಿಕಾ ಕಾರ್ಯಕ್ರಮವನ್ನು ವಯಸ್ಸಿಗನುಸಾರವಾಗಿ ಹಂತಹಂತವಾಗಿ ಜಾರಿಗೊಳಿಸುತ್ತಿದ್ದು, ಇದೀಗ 15 ರಿಂದ 18 ವರ್ಷದ ಮಕ್ಕಳಿಗೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದಾಗಿ ತಿಳಿಸಿ ಮನವರಿಕೆ ಆಗುವಂತೆ ವಿವರಿಸಿದರು .
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಾಲ್ಲೂಕು ತಹಶೀಲ್ದಾರ್ ಎನ್ . ಶಿವಕುಮಾರ್ ಮಾತನಾಡಿ, ಇಂದು ವಿದ್ಯಾರ್ಥಿಗಳು ತಾವು ಲಸಿಕೆ ಪಡೆಯುವುದರ ಜೊತೆಗೆ ನಿಮ್ಮ ಮನೆಯಲ್ಲಿ, ಹಾಗೂ ನಿಮ್ಮ ಮನೆಯ ಸುತ್ತಮುತ್ತ ಯಾರಾದರೂ ಲಸಿಕೆ ಪಡೆಯದಿರುವವರಿದ್ದರೆ ಅವರ ಮನವೊಲಿಸಿ ಲಸಿಕೆ ಹಾಕಿಸಿಕೊಳ್ಳಲು ಕಳುಹಿಸಬೇಕು ಎಂಬುದಾಗಿ ಅವರು ಮನವಿ ಮಾಡಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚಿತ್ರಜಿತ್ ಯಾದವ್ ಮಾತನಾಡಿ, ಸರ್ಕಾರದ ವತಿಯಿಂದ ನೀಡುತ್ತಿರುವ ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಭಯ, ಆತಂಕವಿಲ್ಲದೆ ಲಸಿಕೆಯನ್ನು ಹಾಕಿಸಿಕೊಳ್ಳಬಹುದು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಉಪತಹಶೀಲ್ದಾರರಾದ ತಿಪ್ಪೇಸ್ವಾಮಿ, ನಗರಸಭೆ ಆಯುಕ್ತರಾದ ಡಿ.ಉಮೇಶ್ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್, ನಗರಸಭೆ ಸದಸ್ಯರಾದ ಜಗದೀಶ್, ಜಿ.ದಾದಾಫೀರ್, ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರಪ್ಪ, ಮತ್ತು ಸಿಬ್ಬಂದಿ ವರ್ಗದವರು, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy