ಮಧುಗಿರಿ : ಇಂದಿನ ಒತ್ತಡದ ಬದುಕಿನಲ್ಲಿ ಮಹಿಳೆಯರಿಗೆ ಕಾನೂನು ಆತ್ಮಸ್ಥೈರ್ಯ ಮತ್ತು ಬದುಕುವ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಪ್ರತಿಯೊಬ್ಬ ಮಹಿಳೆಯೂ ಕಾನೂನಿನ ಅರಿವು ಹೊಂದುವುದು ಅತ್ಯವಶ್ಯಕ ಎಂದು ತಹಶೀಲ್ದಾರ್ ನಂದಿನಿ ತಿಳಿಸಿದರು.
ಪಟ್ಟಣದ ಸಿಪಿಸಿ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಹಾಗೂ ಸುರಕ್ಷತೆಗಾಗಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಿಳೆಯರು ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ಅವರ ಯಶೋಗಾಥೆಗಳು ಇತರ ಮಹಿಳೆಯರಿಗೆ ಪ್ರೇರಣೆಯಾಗಬೇಕು. ಹೆಣ್ಣುಮಕ್ಕಳಿಗೆ ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕ ಸೌಲಭ್ಯಗಳು ದೊರೆತಾಗ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ಕೈಗೊಳ್ಳುತ್ತಿರುವ ಮಹಿಳಾ ಸಬಲೀಕರಣದ ಕಾರ್ಯ ಶ್ಲಾಘನೀಯ. ಮಹಿಳೆಯರ ಸಬಲೀಕರಣವೇ ದೇಶದ ಪ್ರಗತಿಗೆ ಬುನಾದಿಯಾಗಿದ್ದು, ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದಿರಬೇಕು ಎಂದರು.
ಯೋಜನೆಯ ತುಮಕೂರು-2 ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಪೂಜ್ಯರು ಈ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಮಹಿಳೆಯರ ಅಭಿವೃದ್ಧಿಯಲ್ಲಿಯೇ ರಾಜ್ಯದ ಅಭಿವೃದ್ಧಿ ಅಡಗಿದೆ ಎಂಬ ನಂಬಿಕೆಯೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಆರ್ಥಿಕ ಸಬಲೀಕರಣದ ಜೊತೆಗೆ ಪ್ರೀತಿ, ವಿಶ್ವಾಸ ಹಾಗೂ ಆತ್ಮವಿಶ್ವಾಸದಿಂದ ಬದುಕುವ ಶಕ್ತಿಯನ್ನು ನೀಡುವುದು ಸಂಸ್ಥೆಯ ಉದ್ದೇಶವಾಗಿದೆ. ಮಹಿಳೆಯರು ಈ ಕಾನೂನು ಅರಿವು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಧಾರ್ಮಿಕ ಮುಖಂಡ ಡಾ. ಎಂ.ಜಿ. ಶ್ರೀನಿವಾಸಮೂರ್ತಿ ಮಾತನಾಡಿ, ಮಹಿಳೆಯರ ಅಭಿವೃದ್ಧಿಯಿಂದ ಸಮಾಜದ ಪರಿವರ್ತನೆ ಸಾಧ್ಯ ಎಂಬುದನ್ನು ಅರಿತು ಪೂಜ್ಯರು ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾಗುವುದರ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಕನಿಷ್ಠ ಅರಿವು ಹೊಂದಿರಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಲಾಲಪೇಟೆ ಮಂಜುನಾಥ್ ಮಾತನಾಡಿ, ಪೂಜ್ಯರು ಮಹಿಳೆಯರಿಗಾಗಿ ರೂಪಿಸಿರುವ ವಿವಿಧ ಯೋಜನೆಗಳಿಂದ ಮಹಿಳೆಯರಲ್ಲಿ ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸ ಹೆಚ್ಚಾಗಿದೆ. ಮಹಿಳೆಯರು ತಮ್ಮ ಹಕ್ಕುಗಳು ಮತ್ತು ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ತಿಳಿದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದರು.
ವಕೀಲರಾದ ದೀಪಾ ಮಹೇಶ್ ಮಾತನಾಡಿ, ದೇಶದ ಕಾನೂನು ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಒದಗಿಸಿದೆ. ಆದರೆ ಕಾನೂನಿನ ಅರಿವು ಇಲ್ಲದಿದ್ದರೆ ಅದರ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಮಹಿಳೆಯರು ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಭಯದಿಂದ ಎದುರಿಸದೆ, ತಮ್ಮ ಹಕ್ಕುಗಳ ಬಗ್ಗೆ ತಿಳಿದು ಧೈರ್ಯದಿಂದ ಮುನ್ನಡೆಯಬೇಕು ಎಂದು ತಿಳಿಸಿದರು.
ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ವಂಚನೆಗಳು, ವಾಹನ ಸಂಚಾರ ನಿಯಮಗಳು, ಬಾಲ್ಯವಿವಾಹ ನಿಷೇಧ, ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಭೂಮಿಯ ಹಕ್ಕು ಸೇರಿದಂತೆ ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಕಾನೂನು ವಿಚಾರಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ-2 ಶಶಿಧರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ ನಾಗೇಶ್, ಜನಜಾಗೃತಿ ವೇದಿಕೆಯ ಸದಸ್ಯೆ ಕೀರ್ತಿಶ್ರೀ, ಲಕ್ಷ್ಮೀ ಚಾರಿಟೇಬಲ್ ಅಧ್ಯಕ್ಷೆ ಲಕ್ಷ್ಮಮ್ಮ, ಕಾರ್ಯದರ್ಶಿ ಸುಧಾ ರಂಗರಾಜು ಸೇರಿದಂತೆ ಹಲವು ಮಹಿಳೆಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
