ಬೆಂಗಳೂರು: ಮೂಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು ಎಂದು ಹೇಳಿದರು.
ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕು ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಜುಲೈ 26ರಂದು ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ಮನವಿ ಕೊಡುತ್ತಾರೆ. ಅದೇ ದಿನ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯುತ್ತಾರೆ. ಮುಖ್ಯ ಕಾರ್ಯದರ್ಶಿಯವರು ಹೋಗಿ ಸ್ಪಷ್ಟನೆ ನೀಡಿ ಬಂದಿದ್ದಾರೆ. ಅದೇದಿನ ಸಂಜೆ ಸಿಎಂ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇ ಎಂದು ಮರುಪ್ರಶ್ನಿಸಿದರು.
ರಾಜ್ಯಪಾಲರು ಸಾಮಾನ್ಯ ರಾಜಕಾರಣಿಯೋ ಅಥವಾ ಅಧಿಕಾರಿಯೋ ಅಲ್ಲ. ಸಂವಿಧಾನದ ಮುಖ್ಯಸ್ಥರು. ಅನೇಕ ಪ್ರಕರಣಗಳು ಅವರ ಕಚೇರಿಯಲ್ಲಿ ಬಾಕಿ ಉಳಿದು, ಯಾವುದಕ್ಕು ಗಮನ ಹರಿಸದೇ ಏಕಾಏಕಿ ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇದೆ. ರಾಜ್ಯಪಾಲರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡುತ್ತೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


