ಕೋಲಾರ: ರಾಜ್ಯದಲ್ಲಿ ತೀವ್ರ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಹಣ ನೀಡಿಲ್ಲ ಎಂದು ದೂರುವ ಬದಲು, ಧೈರ್ಯವಿದ್ದರೆ ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಚುನಾವಣೆ ಎದುರಿಸಲು ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗೆ ಸವಾಲು ಹಾಕಿದ್ದಾರೆ.
ಕೋಲಾರದ ಬಂಗಾರಪೇಟೆ ಮತ್ತು ಕೆಜಿಎಫ್ ನಲ್ಲಿ ನಡೆದ ‘ಸೇವಾ ಸಂಕಲ್ಪ ಅಭಿಯಾನ ಯಾತ್ರೆ’ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರೈತರಿಗೆ ಸೂಕ್ತ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ ಅವರು, ಕೇಂದ್ರದ ಮೇಲೆ ಗೂಬೆ ಕೂರಿಸುವ ಬದಲು ವಿಧಾನಸಭೆಯನ್ನು ವಿಸರ್ಜಿಸಿ ಜನರ ತೀರ್ಪು ಪಡೆಯಲಿ ಎಂದು ಸವಾಲು ಹಾಕಿದರು. ಕಾಂಗ್ರೆಸ್ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೆ ತರಲು ಪರದಾಡುತ್ತಿದ್ದು, ಇದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿದೆ ಎಂದು ಆರೋಪಿಸಿದರು.
ಅಬಕಾರಿ ಇಲಾಖೆಯಿಂದ 45,000 ಕೋಟಿ ರೂ. ಸಂಗ್ರಹಿಸುವ ಗುರಿಯೊಂದಿಗೆ ರಾಜ್ಯದ ಮೂಲೆಮೂಲೆಗಳಲ್ಲಿ ಹೊಸ ಮದ್ಯದ ಅಂಗಡಿಗಳನ್ನು ತೆರೆಯಲು ಸರ್ಕಾರ ಪರವಾನಗಿ ನೀಡುತ್ತಿದೆ ಎಂದು ದೂರಿದ ಅವರು, ಈಗ ದಿನಸಿ ಅಂಗಡಿಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುತ್ತಿರುವುದು ಖಂಡನೀಯ ಎಂದರು. ಸಾರ್ವಜನಿಕ ಕಾಮಗಾರಿಗಳಿಗೆ ಸಚಿವರು ಶೇ. 8ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಸ್ವತಃ ಕಾಂಗ್ರೆಸ್ ಶಾಸಕರೊಬ್ಬರು ಮುಖ್ಯಮಂತ್ರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರವು ಆರ್ಥಿಕವಾಗಿ ದಿವಾಳಿಯಾಗಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಈಗಿನ ಸರ್ಕಾರ ಈ ಸೌಲಭ್ಯವನ್ನು ಕಡಿತಗೊಳಿಸಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಕೂಡಲೇ ಹಾಲಿನ ಪ್ರೋತ್ಸಾಹಧನವನ್ನು 5 ರೂ.ಗೆ ಹೆಚ್ಚಿಸಬೇಕೆಂದು ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಶ್ರಮಿಸುತ್ತಿದ್ದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಅದಕ್ಕೆ ತದ್ವಿರುದ್ಧವಾಗಿ ಭ್ರಷ್ಟರ ಹಿತಾಸಕ್ತಿಗಾಗಿ ಮಾತ್ರ ಆಡಳಿತ ನಡೆಸುತ್ತಿದೆ ಎಂದು ಅವರು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
