ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ ಮುಕ್ತ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಇತರ ನಾಯಕರಿಗೂ ಸಚಿವರಾಗುವ ಅವಕಾಶ ಸಿಗಬೇಕು ಎಂಬ ನಿಟ್ಟಿನಲ್ಲಿ ಸಂಪುಟ ಪುನಾರಚನೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಸರ್ಕಾರ ಈಗ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಹಂತದಲ್ಲಿ ಹೊಸಬರಿಗೆ ಮತ್ತು ಪಕ್ಷಕ್ಕಾಗಿ ಶ್ರಮಿಸಿದ ಇತರ ನಾಯಕರಿಗೆ ಸಚಿವ ಸ್ಥಾನ ನೀಡುವ ದೃಷ್ಟಿಯಿಂದ ಸಂಪುಟ ಪುನಾರಚನೆ ಆಗುವುದು ಒಳ್ಳೆಯದು ಎಂದರು.
ಸಂಪುಟ ಪುನಾರಚನೆಯ ಬಗ್ಗೆ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತೆಗೆದುಕೊಳ್ಳುತ್ತಾರೆ. ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದೊಳಗೆ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಬಲಪಡಿಸಲು 225 ಹೊಸ ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಇನ್ನೂ, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಕೋವಿಡ್ ಖರೀದಿ ಹಗರಣಗಳ ಬಗ್ಗೆ ಡಿ’ಕುನ್ಹಾ ಆಯೋಗದ ತನಿಖೆ ನಡೆಯುತ್ತಿದ್ದು, ದೊಡ್ಡ ಮಟ್ಟದ ಹಣ ದುರುಪಯೋಗವಾಗಿರುವುದು ಕಂಡುಬಂದಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


