ಬೆಂಗಳೂರು: ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 25 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಬೆಳ್ಳಂ ಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ 25 ಕಡೆಗಳಲ್ಲಿ ಲೋಕಾಯುಕ್ತ ತನಿಖಾಧಿಕಾರಿಗಳ ತಂಡ ಏಕ ಕಾಲದಲ್ಲಿ ದಾಳಿ ಮಾಡಿ ಶೋಧ ಕಾರ್ಯ ಕೈಗೊಂಡಿದೆ.
ಬೆಂಗಳೂರಿನ ಬನಶಂಕರಿಯ ಒಂದನೇ ಹಂತದಲ್ಲಿರುವ ನಗರ ಯೋಜನಾ ಇಲಾಖೆಯ ನಿರ್ದೇಶಕರಾದ ತಿಪ್ಪೇಸ್ವಾಮಿ ಅವರ ನಿವಾಸ, ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆಯ ಅಧೀಕ್ಷಕರಾದ ಮೋಹನ್ ಅವರ ನಿವಾಸ, ಮಂಡ್ಯದಲ್ಲಿರುವ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಹಾಗೂ ಚಿಕ್ಕಬಳ್ಳಾಪುರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಅವರ ಮಂಗಳೂರು ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ದೂರಿನನ್ವಯ ಈ ನಾಲ್ವರು ಅಧಿಕಾರಿಗಳ ಮನೆಗಳು, ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಕಾವೇರಿ ನಿಗಮದ ಎಂಡಿ ಮಹೇಶ್ ಅವರ ಮನೆ, ಸಂಬಂಧಿಕರ ಮನೆಗಳ ಮೇಲೆ ಹಾಗೂ ದಳವಾಯಿ ಕೋಡಿಹಳ್ಳಿಯಲ್ಲಿರುವ ಅವರ ಅತ್ತೆ ಮನೆಯ ಮೇಲೂ ದಾಳಿ ನಡೆಸಿ ದಾಖಲೆ ಹಾಗೂ ಆಸ್ತಿ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296