ಚಿಕ್ಕನಾಯಕನಹಳ್ಳಿ: ಶೆಟ್ಟಿಕೆರೆ ಹೋಬಳಿ ಭಾಗದ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ₹2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಎರಡು ಅಂತಸ್ತಿನ ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ತಿಳಿಸಿದರು.
ತಾಲ್ಲೂಕಿನ ಶೆಟ್ಟಿಕೆರೆ ಗ್ರಾಮದಲ್ಲಿ ಮಂಗಳವಾರ ಕೃಷಿ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಇತರೆ ಹೋಬಳಿ ಕೇಂದ್ರಗಳಲ್ಲಿ ರೈತ ಸಂಪರ್ಕ ಕೇಂದ್ರಗಳಿದ್ದರೂ ಶೆಟ್ಟಿಕೆರೆಯಲ್ಲಿ ಸ್ವಂತ ಕಟ್ಟಡದ ವ್ಯವಸ್ಥೆ ಇರಲಿಲ್ಲ. ಹೀಗಾಗಿ ರೈತರು ಹಲವು ವರ್ಷಗಳಿಂದ ಎದುರು ನೋಡುತ್ತಿದ್ದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ₹2 ಕೋಟಿ ವೆಚ್ಚದಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ. ಕಟ್ಟಡದಲ್ಲಿ ಕಚೇರಿ, ರೈತರ ಸಭಾಂಗಣ, ಗೋದಾಮು, ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ, ದಾಖಲೆಗಳ ಕೊಠಡಿ, ಕಂಪ್ಯೂಟರ್ ವಿಭಾಗ, ನಿರೀಕ್ಷಣಾ ಕೊಠಡಿ ಹಾಗೂ ತರಬೇತಿ ಕೇಂದ್ರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಈ ಕೇಂದ್ರದ ಮೂಲಕ ರೈತರಿಗೆ ರಸಗೊಬ್ಬರ, ಕೃಷಿ ಸಲಕರಣೆಗಳು ಹಾಗೂ ಬಿತ್ತನೆ ಬೀಜಗಳ ವಿತರಣೆ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಸೌಲಭ್ಯಗಳನ್ನು ಒಂದೇ ಕಡೆ ಒದಗಿಸಲು ಅನುಕೂಲವಾಗಲಿದೆ. ರೈತರು ಕೇಂದ್ರವನ್ನು ಸಮರ್ಪಕವಾಗಿ ಬಳಸಿಕೊಂಡು ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರಗತಿಪರ ಕೃಷಿಕ ಅರುಣ್ಕುಮಾರ್ ಮಾತನಾಡಿ, ಶೆಟ್ಟಿಕೆರೆ ಭಾಗದಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಸ್ವಂತ ಕಟ್ಟಡದ ಕೊರತೆಯಿಂದಾಗಿ ಬಾಡಿಗೆ ಕಟ್ಟಡದಲ್ಲಿ ಕೇಂದ್ರ ಕಾರ್ಯನಿರ್ವಹಿಸುತ್ತಿತ್ತು. ಇದರಿಂದ ರೈತರ ಸಭೆ ನಡೆಸಲು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ತೊಂದರೆಯಾಗುತ್ತಿತ್ತು. ಸಣ್ಣಪುಟ್ಟ ಕೆಲಸಗಳಿಗೂ ತಾಲ್ಲೂಕು ಕೇಂದ್ರಕ್ಕೆ ತೆರಳಬೇಕಾದ ಪರಿಸ್ಥಿತಿ ಇತ್ತು. ಇದೀಗ ಸ್ವಂತ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿರುವುದು ಸಂತಸ ತಂದಿದೆ. ಈ ಭಾಗದ ರೈತರಿಗೆ ಸರ್ಕಾರದ ಸೌಲಭ್ಯಗಳು ಸುಲಭವಾಗಿ ದೊರೆಯಲು ಅನುಕೂಲವಾಗಲಿದೆ ಎಂದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವರಾಜ್ಕುಮಾರ್ ಮಾತನಾಡಿ, ಸುಮಾರು 30 ವರ್ಷಗಳಿಂದ ಶೆಟ್ಟಿಕೆರೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸುವ ಪ್ರಯತ್ನ ನಡೆಯುತ್ತಿತ್ತು. ಹಲವು ಸ್ಥಳಗಳನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸಿದ್ದರೂ ಕಾರ್ಯರೂಪಕ್ಕೆ ಬಂದಿರಲಿಲ್ಲ. ಕೊನೆಗೆ ಸೂಕ್ತ ಜಾಗ ಗುರುತಿಸಿ ಶಾಸಕರ ಗಮನಕ್ಕೆ ತಂದಾಗ ಅವರು ವಿಶೇಷ ಆಸಕ್ತಿ ವಹಿಸಿ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರಕಿಸಿಕೊಟ್ಟಿದ್ದಾರೆ. ನೂತನ ಕಟ್ಟಡದಿಂದ ರೈತರಿಗೆ ಉತ್ತಮ ಸೇವೆ ಒದಗಿಸಲು ಅನುಕೂಲವಾಗಲಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶೆಟ್ಟಿಕೆರೆ ಹೋಬಳಿಯ ಕೃಷಿ ಅಧಿಕಾರಿ ಮಲ್ಲಿಕಾರ್ಜುನ್, ಶೆಟ್ಟಿಕೆರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೇಬಲ್ ರಾಜು, ಮುಖಂಡರಾದ ನಾಗೇಶ್ ಎಸ್.ಜೆ., ಮಹೇಶ್ ಅಜ್ಜೇನಹಳ್ಳಿ, ಬೈರಪ್ಪ ದಾಸ್ಕೆರೆ, ಏಕೇಶ್, ದಯಾಶಂಕರ್, ತೇಜು, ಮುರುಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
