ಕೊರಟಗೆರೆ: ತಾಲ್ಲೂಕಿನ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪ್ರಬಲ ಆಕಾಂಕ್ಷಿ ಯುವ ಮುಖಂಡ, ಸಮಾಜಸೇವಕ ಎಂ.ಎನ್.ಜೆ. ಮಂಜುನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ಮಂಜುನಾಥ್ ಅವರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕೊರಟಗೆರೆ ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಗುರುವಾರ ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊರಟಗೆರೆ ಜೆಡಿಎಸ್ ಅಧ್ಯಕ್ಷ ಕಾಮರಾಜು, ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ಜೆಡಿಎಸ್ನ ಭದ್ರಕೋಟೆಯಾಗಿದೆ. ಅರಸಾಪುರ, ಬೈಚಾಪುರ, ಅಕ್ಕಿರಾಂಪುರ, ಹೊಳವನಹಳ್ಳಿ ಹಾಗೂ ಬಿ.ಡಿ.ಪುರ ಸೇರಿದಂತೆ ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷಕ್ಕೆ ಉತ್ತಮ ಬೆಂಬಲವಿದೆ. ಜೆಡಿಎಸ್ ಗ್ರಾಮೀಣ ಭಾಗದ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದು, ಯುವ ಮುಖಂಡರು ಸಂಘಟನೆಗೆ ಶ್ರಮಿಸಬೇಕು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗೆ ಕರೆ ನೀಡಿದ್ದಾರೆ. ಮಾಜಿ ಶಾಸಕ ಸುಧಾಕರಲಾಲ್ ಮತ್ತು ಮುಖಂಡ ಪಿ.ಎನ್. ಕೃಷ್ಣಮೂರ್ತಿ ಅವರ ಮಾರ್ಗ ದರ್ಶನದಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ. ಮಂಜುನಾಥ್ ಅವರ ಸೇರ್ಪಡೆ ಪಕ್ಷಕ್ಕೆ ಹೊಸ ಶಕ್ತಿ ನೀಡಲಿದೆ ಎಂದರು.
ಜೆಡಿಎಸ್ ಕಾರ್ಯಾಧ್ಯಕ್ಷ ಲಕ್ಷ್ಮೀಶ್ ಮಾತನಾಡಿ, ಹೊಳವನಹಳ್ಳಿ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷದ ಗಮನಕ್ಕೆ ತರಲಾಗಿದೆ. ಯುವ ನಾಯಕ ಎಂ.ಎನ್.ಜೆ. ಮಂಜುನಾಥ್ ಸೇರ್ಪಡೆಯಿಂದ ಪಕ್ಷಕ್ಕೆ ಯುವಶಕ್ತಿ ದೊರೆತಿದೆ. ಜೆಡಿಎಸ್ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಮತ್ತು ನಿರ್ಧಾರಗಳಿಗೆ ಹೆಚ್ಚಿನ ಮಹತ್ವವಿದೆ ಎಂದು ತಿಳಿಸಿದರು.
ಮಾಜಿ ಗೌರವಾಧ್ಯಕ್ಷ ನರಸಿಂಹರಾಜು ಮಾತನಾಡಿ, ಮಂಜುನಾಥ್ ಅವರು ಹಿರಿಯ ಮುಖಂಡರಾದ ಮಾಜಿ ಶಾಸಕ ಸುಧಾಕರಲಾಲ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಹೊಳವನಹಳ್ಳಿ ಕ್ಷೇತ್ರದ ಕಾರ್ಯಕರ್ತರು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ನೀಡುವ ಕುರಿತು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೊಳವನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜೆಡಿಎಸ್ ಪ್ರಬಲ ಆಕಾಂಕ್ಷಿ ಅಭ್ಯರ್ಥಿಯಾಗಿರುವ ನಾನು ಕಳೆದ ಹತ್ತು ವರ್ಷಗಳಿಂದ ಕೊರಟಗೆರೆ ಕ್ಷೇತ್ರದಲ್ಲಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸದಾ ಸಂಪರ್ಕದಲ್ಲಿದ್ದು, ಅವರೊಂದಿಗೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಮೀಸಲಾತಿ ಬದಲಾಗಿ ಜೆಡಿಎಸ್ ವರಿಷ್ಠರು ಪಿ.ಎನ್.ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದರೂ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ. ಪಕ್ಷದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಪ್ರಯತ್ನಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು.
— ಎಂ.ಎನ್.ಜೆ. ಮಂಜುನಾಥ್, ಜೆಡಿಎಸ್ ಯುವ ನಾಯಕ, ಕೊರಟಗೆರೆ.
ಸಭೆಯಲ್ಲಿ ಹೊಳವನಹಳ್ಳಿ ಕ್ಷೇತ್ರದ ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ, ಕ್ಷೇತ್ರದಲ್ಲಿ ಜೆಡಿಎಸ್ಗೆ ಉತ್ತಮ ನೆಲೆ ಇರುವುದರಿಂದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ನಿಂದಲೇ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.
ಯುವ ನಾಯಕ ಎಂ.ಎನ್.ಜೆ. ಮಂಜುನಾಥ್ ಕಳೆದ ಹತ್ತು ವರ್ಷಗಳಿಂದ ಕೊರಟಗೆರೆ ಕ್ಷೇತ್ರದಲ್ಲಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಜೆಡಿಎಸ್ಗೆ ಸೇರ್ಪಡೆಯಾಗಿರುವುದು ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಬಲ ನೀಡಿದೆ. ಹೊಳವನಹಳ್ಳಿ ಕ್ಷೇತ್ರದ ಕಾರ್ಯಕರ್ತರ ಒತ್ತಾಯದ ಮೇರೆಗೆ ಪಕ್ಷದ ವರಿಷ್ಠರು, ಮಾಜಿ ಶಾಸಕರು ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರು ಮಂಜುನಾಥ್ ಅವರನ್ನು ಜಿಲ್ಲಾ ಪಂಚಾಯಿತಿ ಅಭ್ಯರ್ಥಿಯಾಗಿ ಪರಿಗಣಿಸಬೇಕು.
— ಪ್ರಕಾಶ್ ಎಲ್.ವಿ., ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಕೊರಟಗೆರೆ.
ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯದರ್ಶಿ ಲಕ್ಷ್ಮಣ್, ಪಿಎಲ್ಡಿ ಅಧ್ಯಕ್ಷ ಚಿಕ್ಕರಂಗಯ್ಯ, ಮುಖಂಡರಾದ ದೊಡ್ಡಯ್ಯ, ಲಕ್ಷ್ಮೀ ನಾರಾಯಣ್, ಬಸವರಾಜು, ನವಾಬ್, ಲಕ್ಷ್ಮೀನರಸಯ್ಯ, ಗಂಗಾಧರ್, ಮರುಡಪ್ಪ, ನವೀನ್, ರಂಗಣ್ಣ, ರಮೇಶ್, ವೆಂಕಟರೆಡ್ಡಿ, ರಾಜಣ್ಣ, ರಾಮಕೃಷ್ಣ, ವೆಂಕಟೇಶ್, ಹನುಮಂತರಾಯಪ್ಪ, ನಂದೀಶಪ್ಪ, ಗುರುಮೂರ್ತಿ, ಗೋವಿಂದರಾಜು, ತಿಮ್ಮರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
