ಮಧುಗಿರಿ: ನಗರದ ರಸ್ತೆಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಕ್ರಮಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡಲು ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಪೊಲೀಸರ ತಾತ್ಸಾರವೇ ಕಾರಣ. ಕಿರಿದಾದ ರಸ್ತೆಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಆಕ್ರೋಶದ ಮಾತುಗಳು ಕೇಳಿ ಬಂದಿವೆ.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನಿತ್ಯ ಸಾವಿರಾರು ಮಂದಿ ಪಟ್ಟಣಕ್ಕೆ ಬರುತ್ತಾರೆ. ಆದರೆ ಅವರ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆಯಿಲ್ಲ. ಪಾದಚಾರಿ ಮಾರ್ಗವನ್ನು ಅಂಗಡಿ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಕೆಲವೆಡೆ ವಾಹನ ನಿಲುಗಡೆ ಸ್ಥಳವನ್ನೂ ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿರುವುದರಿಂದ ಕಿರಿಕಿರಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.