ಮಧುಗಿರಿ: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ತರುವ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ, ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಎಡಗೈ ಸಮುದಾಯದ ವಕೀಲರು ಬುಧವಾರ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇವರು ಒಳ ಮೀಸಲಾತಿಯ ವಿರೋಧಿಗಳಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಸ್ತುತ ಬಾಕಿ ಇರುವ 56,432 ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಒಳ ಮೀಸಲಾತಿ ಅನ್ವಯವೇ ನಡೆಸಬೇಕು. ಒಳ ಮೀಸಲಾತಿ ಜಾರಿಯಲ್ಲಿ ವಿಳಂಬ ಮಾಡುವುದರಿಂದ ಸಮುದಾಯದ ವಿದ್ಯಾವಂತ ಯುವಕರ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ. ಶೀಘ್ರವೇ ವೈಜ್ಞಾನಿಕವಾಗಿ ಒಳ ಮೀಸಲಾತಿ ಜಾರಿಗೊಳಿಸಿ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನಂತರ ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ವಕೀಲ ಬಿದಲೋಟಿ ರಂಗನಾಥ್ ಮಾತನಾಡಿ, “ಒಳ ಮೀಸಲಾತಿ ಅಡಿಯಲ್ಲಿ ಉದ್ಯೋಗ ಕಲ್ಪಿಸದಿದ್ದರೆ ವಿದ್ಯಾವಂತರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ” ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ನರಸಿಂಹಮೂರ್ತಿ, ನರಸೀಯಪ್ಪ, ಕಾಳೇನಹಳ್ಳಿ ನರಸಿಂಹಯ್ಯ, ಕಣಿಮಯ್ಯ, ತುಂಡೋಟಿ ರಾಮಾಂಜಿ, ಜೀವಿಕ ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


