ಮಧುಗಿರಿ: ತಾಲ್ಲೂಕು ಪಂಚಾಯಿತಿಯಲ್ಲಿ ಸುಮಾರು ₹4.24 ಕೋಟಿ ರೂಪಾಯಿಗಳ ಹಣ ಅಕ್ರಮ ವರ್ಗಾವಣೆ ಮತ್ತು ದುರುಪಯೋಗ ಆಗಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯಾ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಧುಗಿರಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕಿ (SDA) ಸೌಮ್ಯಾ ಅವರು, ನಿವೃತ್ತ ನೌಕರರ ಅಂತಿಮ ಗಳಿಕೆ ರಜೆ ನಗದೀಕರಣ ಬಿಲ್‌ಗಳನ್ನು ಅಕ್ರಮವಾಗಿ ಸಿದ್ಧಪಡಿಸುತ್ತಿದ್ದರು ಎಂಬ ಆರೋಪವಿದೆ. ಈ ಹಣವನ್ನು ಅರ್ಹ ಫಲಾನುಭವಿಗಳಿಗೆ ನೀಡುವ ಬದಲು, ಸೌಮ್ಯಾ ಅವರು ತಮ್ಮ ಕುಟುಂಬದ ಸದಸ್ಯರ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹಣ ದುರುಪಯೋಗದ ವಿಷಯ ಬೆಳಕಿಗೆ ಬರುತ್ತಿದ್ದಂತೆಯೇ, ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಬಿ.ವಿ. ಅಶ್ವಿಜಾ ಅವರು ಸೌಮ್ಯಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.
ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಅಧಿಕಾರಿಗಳು, ಇದೀಗ ಸೌಮ್ಯಾ ಮತ್ತು ಅವರ ಕುಟುಂಬದ ಸದಸ್ಯರು ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಸಾರ್ವಜನಿಕ ಹಣವನ್ನು ಖಾಸಗಿ ಖಾತೆಗಳಿಗೆ ವರ್ಗಾಯಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಿರುವ ಈ ಘಟನೆ ತಾಲ್ಲೂಕಿನಲ್ಲಿ ಭಾರೀ ಸಂಚಲನ ಮೂಡಿಸಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


