ತುಮಕೂರು: ಮಹಿಳೆಯರು ಮತ್ತು ಹಿಂದುಳಿದ ಜನಸಮುದಾಯದ ಏಳಿಗೆಗೆ ಶ್ರಮಿಸಿದ ಮಹಾತ್ಮ ಜ್ಯೋತಿಬಾ ಫುಲೆಯವರ ಸ್ಮರಣದಿನದ ಸಂದರ್ಭದಲ್ಲಿ ಹೋರಾಟನಿರತ ‘ಆಶಾ’ಗಳಿಗೆ ಬೆಂಬಲ ವ್ಯಕ್ತಪಡಿಸಿ ಎಐಡಿಎಸ್ ಓ ವತಿಯಿಂದ ತುಮಕೂರಿನ ಕುಂಕುಮನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓನ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, “ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ಸಾರ್ವಜನಿಕರ ಆರೋಗ್ಯದ ಕಾಳಜಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆದರೆ, ಇಷ್ಟೊಂದು ಮಹತ್ವದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರಿಗೆ ಸಮರ್ಪಕ ಗೌರವಧನ ಮತ್ತು ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ.
ಜನರ ತೆರಿಗೆ ಹಣದಿಂದ ಆಡಳಿತ ನಡೆಸುವ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಮುಂದಾಗುತ್ತವೆ. ಆದರೆ, ಜನರ ಆರೋಗ್ಯಕ್ಕಾಗಿ ದುಡಿಯುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಹಿಂದೇಟು ಹಾಕುತ್ತಿರುವುದು ಸರ್ಕಾರದ ಜನವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದುವರೆದು ಮಾತನಾಡಿದ ಅವರು “ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ₹15,000 ಮಾಸಿಕ ಗೌರವಧನ ನೀಡಬೇಕು, ಬಾಕಿ ಇರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು, ನಿವೃತ್ತಿ ಸೌಲಭ್ಯ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಬೇಕು ಹಾಗೂ ಕೆಲಸದ ಹೊರೆಗೆ ತಕ್ಕಂತೆ ಸಮರ್ಪಕ ಸೌಲಭ್ಯಗಳನ್ನು ಒದಗಿಸಬೇಕು. ಆಶಾ ಕಾರ್ಯಕರ್ತೆಯರ ಹೋರಾಟ ಕೇವಲ ಅವರ ಹಕ್ಕುಗಳ ಹೋರಾಟವಲ್ಲ; ಅದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ದುಡಿಯುವ ಜನರ ಘನತೆಯನ್ನು ಕಾಪಾಡುವ ಹೋರಾಟವಾಗಿದೆ. ಈ ಹೋರಾಟಕ್ಕೆ ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಪ್ರಜ್ಞಾವಂತ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
