ಬೀದರ್: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿರುವ ಗಾಂಧಿ ಗಂಜ್ ಠಾಣೆ ಪೊಲೀಸರು, 7,17,100 ರೂ. ಮೌಲ್ಯದ 14 ಕೆಜಿ 342 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ 2.25 ಲಕ್ಷ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಪ್ರೀತಂ ಕಾಂಬಳೆ ಎಂದು ಗುರುತಿಸಲಾಗಿದೆ.
ಗುರುವಾರ ನಗರದ ಇರಾನಿ ಕಾಲೋನಿ ಕಡೆಯಿಂದ ಹಳೆ ಆದರ್ಶ ಕಾಲೋನಿಯ ರೈಲ್ವೆ ಗೇಟ್ ಮಾರ್ಗವಾಗಿ ನಾಲ್ವರು ಆರೋಪಿಗಳು ಎರಡು ಬೈಕ್ ಗಳಲ್ಲಿ ಗಾಂಜಾ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಗಾಂಧಿ ಗಂಜ್ ಪೊಲೀಸರು ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡ ತಕ್ಷಣ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
9.42 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ:
ಕಾರ್ಯಾಚರಣೆಯಲ್ಲಿ ಗಾಂಜಾ ಮತ್ತು ಎರಡು ಬೈಕ್ಗಳು ಸೇರಿ ಒಟ್ಟು 9,42,100 ರೂ. ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಪ್ರೀತಂ ಕಾಂಬಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಸಂಬಂಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು ತನಿಖೆ ಮುಂದುವರಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
