ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ವರುಣ ಅಬ್ಬರ ತೀವ್ರಗೊಂಡಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ನಾಲ್ಕು ದಿನಗಳ ಭಾರಿ ಮಳೆಯಾಗಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಮುಂದುವರೆದಿದ್ದು, ಉತ್ತರ ಕರ್ನಾಟಕ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ನಾಲ್ಕು ದಿನ ಮಳೆ ಸುರಿಯಲಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದಿದೆ. ಅಪಾಯದ ಸ್ಥಿತಿಯಲ್ಲಿದ್ದು ಗುಡ್ಡದ ಮತ್ತೊಂದು ಭಾಗ ಕುಸಿದಿರುವ ಘಟನೆ ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಬಳಿ ಸಂಭವಿಸಿದೆ. ಜಮೀನಿನ ಮಾಲೀಕರೊಬ್ಬರ ಮನೆಯ ಮೇಲೆ ಗುಡ್ಡ ಕುಸಿದಿದ್ದು, ಇದು ಅಪಾಯ ಸ್ಥಿತಿಯಲ್ಲಿದ್ದು ಗುಡ್ಡ ಮತ್ತೊಂದು ಭಾಗ ಕುಸಿದಿದ್ದು, ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸೂರಿಕುಮೇರ್ ಗುಡ್ಡ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಸ್ಥಳೀಯರು ರಾಶಿ ರಾಶಿ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಮುಂದಾಗಿದ್ದು ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಕಲ್ಪಿಸಲಾಗಿದೆ.
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ವರುಣ ಅಬ್ಬರ ಮುಂದುವರೆದಿದ್ದು, ತುಂಗಾ ನದಿ ತುಂಬಿ ಹರಿಯುತ್ತಿರುವುದರಿಂದ ಕಿಕ್ರೆ- ಶೃಂಗೇರಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾರಿ ಮಳೆಯಿಂದಾಗಿ ಕಿಕ್ರೆ ಗ್ರಾಮ ದ್ವೀಪವಾಗಿ ಪರಿಣಮಿಸಿದೆ. ಸೇತುವೆ ಮುಳುಗಡೆಯಿಂದಾಗಿ ಜನರು ಪರದಾಡುವಂತಾಗಿದೆ. ಕಳಸ ಸಮೀಪ ಮಳೆಯಿಂದ ಮನೆ ಕುಸಿದು ತಾಯಿ-ಮಗಳ ಬೀದಿ ಪಾಲಾಗಿದ್ದಾರೆ.
ಜಿಲ್ಲೆಯಲ್ಲಿ ರಾತ್ರೋರಾತ್ರಿ ಗುಡ್ಡಕುಸಿದು ಎರಡು ಎಕರೆ ಕಾಫಿ ತೋಟ ನೆಲಕಚ್ಚಿದೆ. ತಾಲ್ಲೂಕಿನ ಕಸ್ಕೆ ಗ್ರಾಮದಲ್ಲಿ ಧಮೇಂದ್ರ ಗೌಡ ಮತ್ತು ರಾಜೇಗೌಡ ತೋಡ ನಾಶವಾಗಿದೆ. ಕಾಫೀ ತೋಟದಲ್ಲಿ ಬಿದ್ದಿರುವ ಬೃಹತ್ ಮರ, ಬಂಡೆಗಳನ್ನು ನೋಡಿ ಭಯಭೀತರಾಗಿದ್ದಾರೆ.ಹಾಸನ ಜಿಲ್ಲೆಯ ಹಲವು ಭಾಗಗಳಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಸಕಲೇಶಪುರ, ಅಲೂರು, ಹಾಸನ, ಅರಕಲಗೂಡು, ಬೇಲೂರಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


