ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸಿ ಸುರಿಯುತ್ತಿರುವುದರಿಂದ ಪ್ರವಾಹ ಉಂಟಾಗಿ ಸಾವು-ನೋವು ಸಂಭವಿಸಿ, ಮನೆ-ಬೆಳೆಗೆ ಹಾನಿಯಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ನೆರವಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚು ಮಳೆಯಾಗುತ್ತಿರುವ ೧೩ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓಗಳ ಜತೆ ವೀಡಿಯೊ ಸಂವಾದ ನಡೆಸಿ ಪ್ರತಿ ಜಿಲ್ಲೆಯ ಮಳೆಯ ಪರಿಸ್ಥಿತಿ, ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕಾರ್ಯಗಳು ಬಗ್ಗೆ ಮಾಹಿತಿ ಪಡೆದುಕೊಂಡರು.
ಮಳೆ ಹೆಚ್ಚಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ಸುರಕ್ಷತೆಗೆ ಕ್ರಮಕೈಗೊಂಡು ಅಗತ್ಯವಿರುವ ಕಡೆ ಪರಿಹಾರ ಶಿಬಿರಗಳನ್ನು ಆರಂಭಿಸಿ ಮಳೆಯಿಂದ ತೊಂದರೆಗೊಳಗಾಗಿರುವವರ ನೆರವಿಗೆ ಅಗತ್ಯ ಕ್ರಮಕೈಗೊಳ್ಳಿ ಎಂದು ಸೂಚಿಸಿದರು.
ಮಳೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳನ್ನು ನಿಯೋಜಿಸಲಾಗಿದೆ. ಜೀವಹಾನಿಯಾಗದಂತೆ ಎಚ್ಚರ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ, ಡಿಸಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಹಣ ಇದೆ. ಹೆಚ್ಚಿನ ಹಣ ಬೇಕಿದ್ದರೆ ಸರ್ಕಾರಕ್ಕೆ ತಿಳಿಸಿ, ತಕ್ಷಣವೇ ಹಣ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಖುದ್ದು ಮೇಲ್ವಿಚಾರಣೆ ನೋಡಿಕೊಳ್ಳಿ ಎಂದು ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದರು.
ಉಸ್ತುವಾರಿ ಸಚಿವರುಗಳ ಮೊಕ್ಕಾಂ:
ಮುಖ್ಯಮಂತ್ರಿಗಳ ಈ ವೀಡಿಯೊ ಸಂವಾದದಲ್ಲಿ ಮಳೆಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರುಗಳು ಪಾಲ್ಗೊಂಡಿದ್ದು, ಪ್ರತಿಯೊಬ್ಬ ಉಸ್ತುವಾರಿ ಸಚಿವರುಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಗಳ ಉಸ್ತುವಾರಿಯನ್ನು ನೋಡಿಕೊಳ್ಳಿ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮಳೆಯ ಅಬ್ಬರ ಕಡಿಮೆಯಾಗುವವರೆಗೂ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲೆಗಳನ್ನು ಬಿಟ್ಟು ತೆರಳದಂತೆ ಸೂಚನೆ ನೀಡಿದ ಅವರು, ಮಳೆಯಿಂದ ಯಾವುದೇ ಅವಘಡಗಳಾಗದಂತೆ ಎಚ್ಚರ ವಹಿಸಿ ಎಂದು ಹೇಳಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


