ತುಮಕೂರು: ಏ.8ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ 8 ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಿದ ಅವರು, ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ ನಡೆಯಲಿದೆ ಎಂದರು.
ಈವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನಸಂಪರ್ಕ ಸಭೆಯನ್ನು ಮಾಡಲಾಗಿದೆ. ಕಂದಾಯ, ಪಂಚಾಯತ್ ರಾಜ್ ಇಲಾಖೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧಿಸಿದ ಅಹವಾಲುಗಳನ್ನು ಸಾರ್ವಜನಿಕರು ನೀಡಿದ್ದಾರೆ. ಕೆಲವು ಪ್ರಕರಣಗಳಲ್ಲಿ ಸ್ಥಳದಲ್ಲೇ ಪರಿಹಾರಗಳನ್ನು ನೀಡಲಾಗಿದೆ. ಕೆಲವು ಕಾಲಮಿತಿಯಲ್ಲಿ ಮಾಡಬೇಕಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಈಗಾಗಲೇ ಕೆಲವು ಬಗೆಹರಿದಿವೆ. ಈ ಪೈಕಿ ಕೆಲವು ಫಲಾನುಭವಿಗಳನ್ನು ಈ ಕಾರ್ಯಕ್ರಮಕ್ಕೆ ಕರೆತರುವಂತೆ ಆಯಾ ತಾಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲಾದ್ಯಂತ ಸುಮಾರು 2500 ಅಹವಾಲುಗಳು ಬಂದಿದ್ದು ಈ ಕಾರ್ಯಕ್ರಮದಲ್ಲಿ ಶೇ.15ರಷ್ಟಾದರೂ ಪರಿಹಾರ ನೋಡಬೇಕೆಂಬ ಉದ್ದೇಶವಿದೆ ಎಂದರು. ಸಾರ್ವಜನಿಕರು ಏ.8ರಂದು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗುವುದು. ಐಪಿಜಿಆರ್ ಎಸ್ ಸೌಲಭ್ಯ ಮಾಡಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಕೇಂದ್ರ ಗ್ರಂಥಾಲಯದ ತಳಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ. ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ಬಿ.ಶುಭ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


