ತುಮಕೂರು: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ಯೋಜನೆವಾರು ಭೂಸ್ವಾಧೀನದ ಪ್ರಸ್ತುತ ಸ್ಥಿತಿಗತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ರೈಲ್ವೆ ಯೋಜನೆಗಳು, ಸ್ಲಮ್ ಬೋರ್ಡ್, ಪ್ಯಾರಾ ಮಿಲಿಟರಿ, ಹೌಸಿಂಗ್ ಬೋರ್ಡ್, ಎತ್ತಿನಹೊಳೆ, ಹೇಮಾವತಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಪರಿಶೀಲಿಸಲಾಯಿತು. ಇದಲ್ಲದೆ, ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಹಾಗೂ ಕೆ.ಐ.ಎ.ಡಿ.ಬಿ. ವ್ಯಾಪ್ತಿಯ ವಿವಿಧ ಯೋಜನೆಗಳ ಭೂಸ್ವಾಧೀನ ಪ್ರಗತಿಯನ್ನೂ ಪರಿಶೀಲಿಸಲಾಯಿತು.
ಸಂಬಂಧಪಟ್ಟ ಅಧಿಕಾರಿಗಳು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಇದುವರೆಗೆ ಕೈಗೊಂಡಿರುವ ಕ್ರಮಗಳು, ಪೂರ್ಣಗೊಂಡಿರುವ ಪ್ರಕರಣಗಳು ಹಾಗೂ ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಬಾಕಿ ಪ್ರಕರಣಗಳಲ್ಲಿನ ತಾಂತ್ರಿಕ, ಆಡಳಿತಾತ್ಮಕ ಹಾಗೂ ಇತರೆ ಅಡೆತಡೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಮುಖವಾಗಿರುವುದರಿಂದ ಬಾಕಿ ಇರುವ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ನಿಗದಿತ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
