ತುಮಕೂರು : ಗಣಿಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆಯಡಿ (CEPMIZ) ಅನುಮೋದನೆಗೊಂಡಿರುವ ವಿವಿಧ ಇಲಾಖೆಗಳ ಕಾಮಗಾರಿಗಳ ಅನುಷ್ಠಾನಕ್ಕೆ ವೇಗ ನೀಡಬೇಕು. ಬಾಕಿ ಉಳಿದಿರುವ ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ತ್ವರಿತವಾಗಿ ಸಿದ್ಧಪಡಿಸಿ ಸಲ್ಲಿಸುವಂತೆ ಯೋಜನೆಯ ಮೇಲುಸ್ತುವಾರಿ ಪ್ರಾಧಿಕಾರದ ಸಲಹೆಗಾರ ಡಾ. ಸಂಜಯ್ ಎಸ್. ಬಿಜ್ಜೂರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅನುಮೋದಿತ ಪ್ರಸ್ತಾವನೆಗಳ ಪ್ರಗತಿ ಹಾಗೂ ಡಿಪಿಆರ್ ಸಲ್ಲಿಕೆ ಕುರಿತು ಪರಿಶೀಲನೆ ನಡೆಸಿದರು.
ತೋಟಗಾರಿಕೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಸ್ತಾವನೆಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಇನ್ನೂ ಡಿಪಿಆರ್ ಸಲ್ಲಿಸದ ಇಲಾಖೆಗಳು ನಿಯಮಾನುಸಾರ ಅಗತ್ಯ ಮಾಹಿತಿಯೊಂದಿಗೆ ಯೋಜನಾ ವರದಿಯನ್ನು ಸಿದ್ಧಪಡಿಸಿ ಕೂಡಲೇ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ನಿರ್ದೇಶನ ನೀಡಿದರು.
ವಿಶೇಷವಾಗಿ ಕಳೆದ ಎರಡು ವರ್ಷಗಳಿಂದ ರೇಷ್ಮೆ ಇಲಾಖೆಯ ಕೆಲವು ಪ್ರಸ್ತಾವನೆಗಳಿಗೆ ಸಂಬಂಧಿಸಿದ ಡಿಪಿಆರ್ ಸಲ್ಲಿಕೆಯಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಾಕಿ ಇರುವ ವರದಿಗಳನ್ನು ತಕ್ಷಣ ಸಿದ್ಧಪಡಿಸಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಡಿಪಿಆರ್ ಸಿದ್ಧಪಡಿಸುವ ಸಂದರ್ಭದಲ್ಲಿ ತಾಂತ್ರಿಕ, ಆಡಳಿತಾತ್ಮಕ ಅಥವಾ ಅನುಷ್ಠಾನ ಸಂಸ್ಥೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಎದುರಾದರೆ ಸಂಬಂಧಿಸಿದ ಅಧಿಕಾರಿಗಳು ತಮ್ಮನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು ಅಥವಾ ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕಾರಿಗಳು ವಿಳಂಬ ಮಾಡದೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, CEPMIZ ಕಾರ್ಯಕ್ರಮದಡಿ ಅನುಮೋದನೆಗೊಂಡಿರುವ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ತೋಟಗಾರಿಕೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ರೇಷ್ಮೆ ಸೇರಿದಂತೆ ಎಲ್ಲಾ ಇಲಾಖೆಗಳು ನಿಯಮಾನುಸಾರ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇದೇ ವೇಳೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ಇನ್ನೂ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸದ ಇಲಾಖೆಗಳು ಸೂಕ್ತ ಯೋಜನಾ ವರದಿಗಳನ್ನು ಸಿದ್ಧಪಡಿಸಿ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಂಡಿಸಬೇಕು. ಸಮಿತಿಯ ಅನುಮೋದನೆ ಪಡೆದು ಮುಂದಿನ ಪ್ರಕ್ರಿಯೆ ಕೈಗೊಳ್ಳುವುದು ಸೂಕ್ತ ಎಂದು ಡಾ. ಸಂಜಯ್ ಎಸ್. ಬಿಜ್ಜೂರ ಅಭಿಪ್ರಾಯ ಪಟ್ಟರು.
ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಉದ್ದೇಶದಿಂದ ಅನುಮೋದನೆಗೊಂಡಿರುವ ಯೋಜನೆಗಳು ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಡಿಪಿಆರ್ಗಳು ಮತ್ತು ಪ್ರಸ್ತಾವನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಲ್ಲಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
