ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಸಚಿವರ ಸ್ವಂತ ಜಿಲ್ಲೆಯಾದ ಚಿತ್ರದುರ್ಗದಾದ್ಯಂತ ಮೇ 11ರ ಸೋಮವಾರದಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ.
ಮೇ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಇಡೀ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆ ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಮತ್ತು ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ.
ಮೃತರ ಅಂತ್ಯಕ್ರಿಯೆಯು ಮೇ 11 ರ ಸಂಜೆ 4 ಗಂಟೆಗೆ ಅವರ ಹುಟ್ಟೂರಾದ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
ಸಚಿವ ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ. “ಬಡವರ ಬಂಧು ಎಂದೇ ಖ್ಯಾತರಾಗಿದ್ದ ಸುಧಾಕರ್ ಅವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ದೊಡ್ಡ ನಷ್ಟ,” ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.
ಸುಧಾಕರ್ ಅವರು ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮತ್ತು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


