ತುಮಕೂರು: ದೇಶದ ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕಾದರೆ ಶೇ. 50ರಷ್ಟು ಮಹಿಳಾ ಮೀಸಲಾತಿ ಮಸೂದೆ ಶೀಘ್ರವಾಗಿ ಅನುಮೋದನೆಗೊಳ್ಳಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದ ಕಾಲದಲ್ಲೇ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿತ್ತು. ಡಾ. ಮನ್ಮೋಹನ್ ಸಿಂಗ್ ಅವರ ಕಾಲದಲ್ಲಿ ಮಂಡನೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿರಲಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಇದನ್ನು ಜಾರಿಗೆ ತಂದು ಮಹಿಳೆಯರಿಗೆ ಶಕ್ತಿ ತುಂಬಬೇಕು ಎಂದರು.
ಭಾರತದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದ್ದು, ಅವರು ಇಂದು ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸಮನಾಗಿ ಸಾಧನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೂ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಅವಕಾಶಗಳನ್ನು ಸೃಷ್ಟಿಸಿಕೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, “ಮಹಿಳೆಯರು ಅವಕಾಶಗಳಿಗಾಗಿ ಕಾಯದೆ, ತಾವೇ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು. ಮನೆಯ ಜವಾಬ್ದಾರಿಯ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸುವುದು ಮುಖ್ಯ,” ಎಂದರು. ಜಿಲ್ಲೆಯಲ್ಲಿ 1,160 ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದ್ದು, ಸದ್ಯದಲ್ಲೇ 22 ಸಾವಿರ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಆರ್ಥಿಕ ಸ್ವಾತಂತ್ರ್ಯದ ಅಗತ್ಯ: ನ್ಯಾ. ನೂರುನ್ನಿಸಾ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗೌರವಾಧ್ಯಕ್ಷೆ ನ್ಯಾ. ನೂರುನ್ನಿಸಾ ಮಾತನಾಡಿ, ಮಹಿಳೆಯರು ಇಂದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ತಾವು ಗಳಿಸಿದ ಹಣದ ಮೇಲೆ ಪೂರ್ಣ ಆರ್ಥಿಕ ಸ್ವಾತಂತ್ರ್ಯವನ್ನು ಹೊಂದುವ ಹಕ್ಕನ್ನು ಅವರು ಪಡೆಯಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಶುಭ ಸಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ. ಸಿದ್ಧರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಮಹಿಳಾ ಅಧಿಕಾರಿಗಳು ಹಾಗೂ ಮಹಿಳಾ ಸಾಧಕಿಯರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


