ತುಮಕೂರು: ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ೬,೯೨,೫೦೮ ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಸೂಚಿಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆದಾಯ ತೆರಿಗೆ ಪಾವತಿ ಮಾಡುವ, ಕುಟುಂಬದ ಆದಾಯ ೧.೨೦ ಲಕ್ಷಕ್ಕಿಂತ ಹೆಚ್ಚಿರುವ, ಸರ್ಕಾರಿ ನೌಕರರು, ೩ ಹೆಕ್ಟೇರ್ ಗಿಂತ ಹೆಚ್ಚು ಭೂಮಿ ಹೊಂದಿರುವ ಪಡಿತರ ಚೀಟಿಗಳನ್ನು ರದ್ದುಪಡಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿದ್ದರೂ ಕೇವಲ ೯೮,೮೯೩ ಪಡಿತರ ಚೀಟಿಗಳನ್ನು ಮಾತ್ರ ರದ್ದುಪಡಿಸಲಾಗಿದೆ. ಉಳಿದ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಸೂಚನೆ ನೀಡಿದರು.
ವಸತಿ ರಹಿತ ಬಡವರು, ನಿರ್ಗತಿಕ ಫಲಾನುಭವಿಗಳಿಗೆ ಬಸವ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ, ಪ್ರಧಾನಮಂತ್ರಿ ಅವಾಸ್ ಸೇರಿ ವಿವಿಧ ವಸತಿ ಯೋಜನೆಗಳಡಿ ವಸತಿ ಕಲ್ಪಿಸಲು ೨೦೧೫ ರಿಂದ ೨೦೨೩ರವರೆಗೆ ೫೨೮೨೩ ಮನೆಗಳನ್ನು ನಿರ್ಮಿಸಲು ನೀಡಲಾಗಿದ್ದ ಗುರಿಯ ಪೈಕಿ ಕೇವಲ ೪೩೧೬೬ ಮನೆಗಳನ್ನು ಮಾತ್ರ ಪೂರ್ಣಗೊಳಿಸಲಾಗಿದ್ದು, ೩೧೬೬ ಮನೆಗಳ ನಿರ್ಮಾಣ ಇನ್ನೂ ಪ್ರಾರಂಭಗೊಂಡಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದ ಸಚಿವರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಮರ್ಪಕವಾಗಿ ಯೋಜನೆಯನ್ನು ಅನುಷ್ಟಾನಗೊಳಿಸಬೇಕೆಂದು ವಸತಿ ಯೋಜನೆಯ ಯೋಜನಾ ನಿರ್ದೇಶಕ ನಾರಾಯಣ ಸ್ವಾಮಿ ಅವರಿಗೆ ಸೂಚನೆ ನೀಡಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಟಾನ ಕುರಿತು ಪ್ರಗತಿ ಪರಿಶೀಲಿಸಿದ ಅವರು, ಪ್ರತಿ ಮಾಹೆ ಕುಟುಂಬದ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯಡಿ ಪಾವತಿಯಾಗುತ್ತಿರುವ ಫಲಾನುಭವಿಗಳ ಸಂಖ್ಯೆ ಹಾಗೂ ಅವರ ಖಾತೆಗೆ ಪಾವತಿಸಿದ ಹಣದ ಬಗ್ಗೆ ಮಾಹಿತಿ ಪಡೆದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು ಸಭೆಗೆ ಮಾಹಿತಿ ನೀಡಿ ಮೇ ಮಾಹೆಯ ಅಂತ್ಯದವರಗೆ ೫೯,೨೭,೨೫೪ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯಡಿ ಒಟ್ಟು ೧೧೮೫.೪೫ ಕೋಟಿ ರೂ.ಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಗೃಹ ಸಚಿವರು ಗೃಹ ಜ್ಯೋತಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಂದರ್ಭದಲ್ಲಿ ಕೋಟಿಗಳಲ್ಲಿ ಹೇಳಬೇಕಾದ ಅಂಕಿ-ಅಂಶಗಳನ್ನು ಲಕ್ಷಗಳಲ್ಲಿ ಹೇಳಿದ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಅವರನ್ನು ತರಾಟೆಗೆ ತೆಗೆದುಕೊಂಡರು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಸೆಪ್ಟೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ನರೇಗಾ, ಗಂಗಾ ಕಲ್ಯಾಣ ಯೋಜನೆ, ಎತ್ತಿನ ಹೊಳೆ ಹಾಗೂ ಹೇಮಾವತಿ, ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳು, ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗ, ಕಾರ್ಮಿಕ ಇಲಾಖೆ, ವಿವಿಧ ನಿಗಮಗಳು, ಕೈಗಾರಿಕಾಭಿವೃದ್ಧಿ ಪ್ರದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಂಸದ ಗೋವಿಂದ ಕಾರಜೋಳ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಡಾ: ಹೆಚ್.ಡಿ. ರಂಗನಾಥ್, ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಬಿ.ಸುರೇಶ್ ಗೌಡ, ಹೆಚ್.ವಿ. ವೆಂಕಟೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296