ತುಮಕೂರು: ತಾಲ್ಲೂಕಿನ ಹಿರೇಹಳ್ಳಿ ಕೆರೆಯ ಒತ್ತುವರಿಯನ್ನು ತಕ್ಷಣವೇ ತೆರವುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ತುಮಕೂರು ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ಹಿರೇಹಳ್ಳಿ ಗ್ರಾಮ ಪಂಚಾಯತಿಗೆ ದಿಢೀರ್ ಭೇಟಿ ನೀಡಿದ ಸಚಿವರು, ಸ್ಥಳೀಯ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ಈ ಮಹತ್ವದ ಕ್ರಮ ಕೈಗೊಂಡಿದ್ದಾರೆ.
ಒಟ್ಟು 18 ಎಕರೆ ವಿಸ್ತೀರ್ಣವಿರುವ ಹಿರೇಹಳ್ಳಿ ಕೆರೆಯಲ್ಲಿ ಅರ್ಧದಷ್ಟು ಭಾಗ ಒತ್ತುವರಿಯಾಗಿರುವುದನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಕಾನೂನುರೀತಿ ಒತ್ತುವರಿ ತೆರವುಗೊಳಿಸಿ ಕೆರೆ ಪುನಶ್ಚೇತನಗೊಳಿಸಲು ಸಿ.ಇ.ಒ ಅವರಿಗೆ ಆದೇಶಿಸಿದರು.
ಕೆರೆ ಪಕ್ಕದ ಕೈಗಾರಿಕೆಯಿಂದ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವುದರಿಂದ ನೀರು ಕಲುಷಿತಗೊಂಡು ಜಾನುವಾರುಗಳು ಸಾಯುತ್ತಿವೆ ಹಾಗೂ ಜನರಿಗೆ ಚರ್ಮವ್ಯಾಧಿ ಬರುತ್ತಿದೆ ಎಂದು ಗ್ರಾಮಸ್ಥರು ದೂರಿಕೊಂಡರು. ಕೂಡಲೇ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಪಂಚಾಯತಿ ಕಚೇರಿಯ ಹಾಜರಾತಿ ಪುಸ್ತಕ ಪರಿಶೀಲಿಸಿದ ಸಚಿವರು, ಪಂಚಾಯತಿ ಮುಂದಿನ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ 25 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡುವುದಾಗಿ ಸ್ಥಳದಲ್ಲೇ ಘೋಷಿಸಿದರು.
ಹಿರೇಹಳ್ಳಿಯ ಯೋಗೀಶ್ ಲೇಔಟ್ ನವರು ಬೇರೆಯವರ ಜಮೀನಿಗೆ ತ್ಯಾಜ್ಯ ನೀರು ಹರಿಸುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ, ಲೇಔಟ್ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳು ಸದಾ ಮುಂದಿರಬೇಕು ಎಂದು ಸಚಿವರು ಎಚ್ಚರಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
