ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪೋಕ್ಸೋ (POCSO) ಪ್ರಕರಣ ಎದುರಿಸುತ್ತಿರುವ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ವಿಶೇಷ ಸತ್ರ ನ್ಯಾಯಾಲಯ ಸೋಮವಾರ (ಮಾರ್ಚ್ 09) ವಜಾ ಮಾಡಿದೆ.
ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ತನಿಖೆಗೆ ಸೂಚಿಸಿತ್ತು. ಅದರಂತೆ ಫೆಬ್ರವರಿ 25ರಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಮುತ್ಯಾ, ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು, ಸರ್ಕಾರಿ ವಕೀಲರ ಆಕ್ಷೇಪಣೆ ಹಾಗೂ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನೀಡಲು ನಿರಾಕರಿಸಿದ್ದಾರೆ. ಈ ಮೊದಲು ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದರೂ ಸಹ, ಅಲ್ಲಿ ಅರ್ಜಿಯನ್ನು ವಾಪಸ್ ಪಡೆದು ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದರು.
ಸದ್ಯ ಶಹಾಪುರ ಸಿಪಿಐ ಶರಣಗೌಡ ನಾಮಣ್ಣವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಈಗಾಗಲೇ ಆರೋಪಿ ಮುತ್ಯಾನ ನಾಲ್ಕು ಮೊಬೈಲ್ ಫೋನ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಮೊಬೈಲ್ ಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ, ಸ್ವಯಂ ಘೋಷಿತ ದೇವಮಾನವನಿಗೆ ಜೈಲು ಭೀತಿ ಎದುರಾಗಿದ್ದು, ಮುಂದಿನ ಹಂತವಾಗಿ ಹೈಕೋರ್ಟ್ ಮೆಟ್ಟಿಲೇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


