ತುಮಕೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಿಪಟೂರು ಶಾಸಕ ಷಡಕ್ಷರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿಗೆ ಭಾನುವಾರ ಮರಳಿದ್ದಾರೆ. ದೆಹಲಿಯಿಂದ ವಿಮಾನದ ಮೂಲಕ ಷಡಕ್ಷರಿ ಅವರು ಮಧ್ಯಾಹ್ನ 2.55 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್–1ಕ್ಕೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಮುಖಂಡ ಯೋಗೀಶ್ ಇತರರು ಹೂಗುಚ್ಛ ನೀಡಿ ಬರಮಾಡಿಕೊಂಡರು.
ಸಂಪುಟದಲ್ಲಿ ಅವಕಾಶ ಕಲ್ಪಿಸುವಂತೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡಲು ದೆಹಲಿಗೆ ತೆರಳಿದ್ದ ಷಡಕ್ಷರಿ ಅವರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾಗಲೇ ಅಸ್ವಸ್ಥಗೊಂಡಿದ್ದರು. ಅವರನ್ನು ಎಂಎಲ್ ಎ ಆರ್.ರಾಜೇಂದ್ರ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ಕೊಡಿಸಲು ನೆರವಾದರು. ಸಿಎಂ ಡಿ.ಕೆ. ಶಿವಕುಮಾರ್ ಅವರು ಸಹ ಆಸ್ಪತ್ರೆಗೆ ಭೇಟಿಕೊಟ್ಟು ಶಾಸಕರ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿಗೆ ತೆರಳಿದ ಸಂದರ್ಭದಲ್ಲಿ ಅಸ್ವಸ್ಥತೆ ಉಂಟಾಗಿದ್ದು, ಸಕಾಲಿಕ ಚಿಕಿತ್ಸೆಯ ನೆರವಿನಿಂದ ಗುಣಮುಖನಾಗಿರುವೆ. ನನ್ನ ಆರೋಗ್ಯ ಕಾಳಜಿ ವಹಿಸಿದ ಸಿಎಂ, ಡಿಸಿಎಂ, ಎಂಎಲ್ ಎ ರಾಜೇಂದ್ರ ಸೇರಿ ಎಲ್ಲರಿಗೂ ವಂದಿಸುವೆ. ಹಿರಿಯ ಶಾಸಕನಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಸಂಪುಟ ವಿಸ್ತರಣೆಯಲ್ಲಿ ಕೊಡುವ ವಿಶ್ವಾಸವಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


