ತುಮಕೂರು: ಕೃಷಿ ಕಾಯ್ದೆ ವಾಪಸ್ ಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಮಯದಲ್ಲಿ 750ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಇದೀಗ ಕಾಯ್ದೆಯನ್ನು ವಾಪಸ್ ಪಡೆದುಕೊಳ್ಳುತ್ತೇನೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಹೇಳಬೇಕೆ? ಎಂದು ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದ ಗಾಜಿನ ಮನೆಯಲ್ಲಿ ಭಾನುವಾರ ನಡೆಯಲಿರುವ ಕಾಂಗ್ರೆಸ್ ಪಕ್ಷ ಜನಜಾಗೃತಿ ಅಭಿಯಾನದ ಸಿದ್ಧತೆಗಳನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆ, ಚಳಿ, ಗಾಳಿಯಲ್ಲಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ರೈತರನ್ನು ಅಯ್ಯೋ ಎನ್ನಿಸಿದ ಸರ್ಕಾರ ಅಭಿನಂದನೆಗೆ ಅರ್ಹವಲ್ಲ. ಒಂದು ವರ್ಷದಿಂದ ಧರಣಿ ಕುಳಿತಿದ್ದರೂ ಕನಿಷ್ಠ ಸೌಜನ್ಯಕ್ಕೂ ಭೇಟಿಯಾಗಿ ಮಾತುಕತೆ ನಡೆಸಲಿಲ್ಲ. ಈಗ ವಾಪಸ್ ಪಡೆಯುವುದಾಗಿ ಹೇಳಿರುವುದಕ್ಕೆ ಮೋದಿ ಅವರನ್ನು ಅಭಿನಂದಿಸಿದರೆ, ಹೋರಾಟನಿರತ ರೈತರಿಗೆ ಮಾಡಿದ ಅಪಮಾನವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ರೈತರ ಪ್ರತಿಭಟನೆ ವಿಶ್ವದ ಗಮನ ಸೆಳೆದಿತ್ತು. ಹಲವು ರಾಷ್ಟ್ರಗಳು ಈ ಬಗ್ಗೆ ಮಾತನಾಡಿದ್ದವು. ಆದರೂ ಸ್ಪಂದಿಸಲಿಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆ ಸೋಲು, ಮುಂಬರುವ ಐದು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿರುವುದಾಗಿ ಹೇಳುತ್ತಿರುವುದು ವಿಪರ್ಯಾಸ ಎಂದು ಅವರು ಹೇಳಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700