ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಆಗ್ರಹಿಸಿ ಕಾಂಗ್ರೆಸ್ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ ದೆಹಲಿಗೆ ಪ್ರಯಾಣ ಬೆಳೆಸಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಲು ಈ ಶಾಸಕರು ನಿರ್ಧರಿಸಿದ್ದಾರೆ.
ಸಚಿವ ಸಂಪುಟದಲ್ಲಿರುವ ಸುಮಾರು 20 ಹಿರಿಯ ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಮತ್ತು ಸತತವಾಗಿ ಗೆಲ್ಲುತ್ತಿರುವ ಶಾಸಕರಿಗೆ ಅವಕಾಶ ನೀಡಬೇಕು ಎಂಬುದು ದೆಹಲಿಗೆ ತೆರಳಿರುವ ಶಾಸಕರ ಪ್ರಮುಖ ಬೇಡಿಕೆಯಾಗಿದೆ.
ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಶಾಸಕರು ದೆಹಲಿಗೆ ತೆರಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ಶಾಸಕರು ಸಮಯ ಕೇಳಿದ್ದಾರೆ.
ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಕ್ಕೆ ಚುರುಕು ಮುಟ್ಟಿಸಲು ಸಂಪುಟ ಪುನರ್ ರಚನೆ ಅನಿವಾರ್ಯ ಎಂಬುದು ಅತೃಪ್ತ ಶಾಸಕರ ವಾದ. ಇದು ಕೇವಲ ಸಚಿವ ಸ್ಥಾನದ ಬೇಡಿಕೆಯಾಗಿದ್ದು, ನಾಯಕತ್ವ ಬದಲಾವಣೆಯ ಪ್ರಶ್ನೆಯಲ್ಲ ಎಂದು ಅಶೋಕ ಪಟ್ಟಣ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನರ್ ರಚನೆ ಕುರಿತ ಅಂತಿಮ ನಿರ್ಧಾರವನ್ನು ವರಿಷ್ಠರೇ ಕೈಗೊಳ್ಳಲಿದ್ದಾರೆ,” ಎಂದು ತಿಳಿಸಿದ್ದಾರೆ.
ಲಕ್ಷ್ಮಣ ಸವದಿ, ಪಿ.ಎಂ. ನರೇಂದ್ರ ಸ್ವಾಮಿ, ವಿನಯ್ ಕುಲಕರ್ಣಿ, ಪುಟ್ಟರಂಗಶೆಟ್ಟಿ, ಎಂ.ವೈ. ಪಾಟೀಲ್, ರಿಜ್ವಾನ್ ಅರ್ಷದ್ ಸೇರಿದಂತೆ 25ಕ್ಕೂ ಹೆಚ್ಚು ಶಾಸಕರು ಈ ತಂಡದಲ್ಲಿದ್ದಾರೆ.
ಮುಂಬರುವ ಮೂರ್ನಾಲ್ಕು ದಿನಗಳ ಕಾಲ ದೆಹಲಿಯಲ್ಲೇ ಬೀಡುಬಿಡಲಿರುವ ಈ ಶಾಸಕರ ನಡೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


